


ನವದೆಹಲಿ: ಸಂಸದ ಸ್ಥಾನದಿಂದ ರಾಹುಲ್ ಗಾಂಧಿ (Rahul Gandhi) ಅನರ್ಹ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಕೈ ನಾಯಕ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.
ಈ ಸಂಬಂಧ ಟ್ವೀಟ್ ಮಡಿರುವ ರಾಗಾ, ನಾನು ಭಾರತದ ಧ್ವನಿಯಾಗಿ ಹೋರಾಡುತ್ತೇನೆ. ನಾನು ಯಾವುದೇ ಬೆಲೆ ತೆರಲು ಸಿದ್ಧ ಎಂದು ಹೇಳಿದ್ದಾರೆ.
2019ರ ಲೋಕಸಭಾ ಚುನಾವಣೆ (Loksabha Election 2019) ಯ ವೇಳೆ ನರೇಂದ್ರ ಮೋದಿಯವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿಗೆ ಸೂರತ್ ಕೋರ್ಟ್ ಗುರುವಾರ ಬೆಳಗ್ಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಶಿಕ್ಷೆ ವಿಧಿಸಿದ ಬೆನ್ನಲ್ಲೇ ರಾಹುಲ್ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಸಿದ್ದು ಸೂರತ್ ಕೋರ್ಟ್ 30 ದಿನಗಳ ಜಾಮೀನು ಮಂಜೂರು ಮಾಡಿದೆ.
ಕಳೆದ ಲೋಕಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಕರ್ನಾಟಕದ ಕೋಲಾರ (Rahul Kolar Speech) ದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಓರ್ವ ಕಳ್ಳ ಎಂದು ರಾಹುಲ್ ಗಾಂಧಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ನಿರವ್ ಮೋದಿ, ಲಲಿತ್ ಮೋದಿ, ನರೇಂದ್ರ ಮೋದಿ ಇವರೆಲ್ಲರ ಸರ್ ನೇಮ್ ಒಂದೇ ಆಗಿದ್ದು, ಈ ಎಲ್ಲಾ ಕಳ್ಳರು ದೇಶವನ್ನು ಲೂಟಿ ಮಾಡಿದ್ದಾರೆ ಎಂದು ರಾಹುಲ್ ತಮ್ಮ ಭಾಷಣದಲ್ಲಿ ಹರಿಹಾಯ್ದಿದ್ದರು.
ಈ ಹೇಳಿಕೆಯನ್ನು ಆಧರಿಸಿ ಬಿಜೆಪಿ ಶಾಸಕ ಮತ್ತು ಗುಜರಾತ್ ಮಾಜಿ ಸಚಿವ ಪೂರ್ಣೇಶ್ ಮೋದಿ ಅವರು ಕ್ರಿಮಿನಲ್ ಮಾನಹಾನಿ ದೂರು ದಾಖಲಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ್ದ ಸೂರತ್ ಕೋರ್ಟ್ ರಾಹುಲ್ ದೋಷಿ ಎಂದು ತೀರ್ಪು ನೀಡಿ 2 ವರ್ಷ ಜೈಲು ಶಿಕ್ಷೆಯನ್ನು ಪ್ರಕಟಿಸಿತ್ತು.


