
ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದ ಹಾಗೂ ಉಪಮುಖ್ಯಮಂತ್ರಿ ಪದಗ್ರಹಣ ಮಾಡಿದ ಡಿಕೆ ಶಿವಕುಮಾರ್ ಅವರಿಗೆ ಪ್ರಧಾನಿ ಮೋದಿ ಶುಭಕೋರಿದ್ದಾರೆ.
ಬೆಂಗಳೂರು: ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದ ಸಿದ್ದರಾಮಯ್ಯ (Siddaramaiah) ಹಾಗೂ ಉಪಮುಖ್ಯಮಂತ್ರಿ ಪದಗ್ರಹಣ ಮಾಡಿದ ಡಿಕೆ ಶಿವಕುಮಾರ್ (DK Shivakumar) ಅವರಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಶುಭಕೋರಿದ್ದಾರೆ. ಇವರಲ್ಲದೆ, ಕರ್ನಾಟಕ ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ (Basavaraj Bommai) ಮತ್ತು ಹೆಚ್ಡಿ ಕುಮಾರಸ್ವಾಮಿ (HD Kumaraswamy) ಅವರು ಕೂಡ ಟ್ವೀಟ್ ಮೂಲಕ ಶುಭ ಕೋರಿದ್ದಾರೆ.
ಟ್ವೀಟ್ ಮೂಲಕ ಶುಭಕೋರಿದ ಪ್ರಧಾನಿ ನರೇಂದ್ರ ಮೋದಿ, “ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆಗಳು. ಫಲಪ್ರದ ಅಧಿಕಾರಾವಧಿಗಾಗಿ ನನ್ನ ಶುಭ ಹಾರೈಕೆಗಳು” ಎಂದು ಹೇಳಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೂಡ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರಿಗೆ ಶುಭಕೋರಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿದ ಅವರು, “ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಸಿದ್ದರಾಮಯ್ಯ ಅವರು ಹಾಗೂ ಅವರ ಸಚಿವ ಸಂಪುಟ ಸದಸ್ಯರಿಗೆ ಹೃತ್ಪೂರ್ವಕ ಅಭಿನಂದನೆಗಳು” ಎಂದರು.

ಮತ್ತೋರ್ವ ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಕೂಡ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರಿಗೆ ಟ್ವೀಟ್ ಮೂಲಕ ಶುಭಕೋರಿದ್ದಾರೆ. “ರಾಜ್ಯದಲ್ಲಿ ಹೊಸದಾಗಿ ಅಸ್ತಿತ್ವಕ್ಕೆ ಬಂದ ಕಾಂಗ್ರೆಸ್ ಸರಕಾರಕ್ಕೆ ಶುಭವಾಗಲಿ. ನೂತನ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು, ಉಪ ಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ಅವರು ಹಾಗೂ ಅವರ ಸಂಪುಟ ಸಹೋದ್ಯೋಗಿಗಳಿಗೆ ಹಾರ್ದಿಕ ಶುಭಾಶಯಗಳು” ಎಂದರು.
“ರಾಜ್ಯದ ಜನತೆಗೆ ಅರ್ಪಣಾ ಮನೋಭಾವದಿಂದ ಅವರೆಲ್ಲರೂ ಸೇವೆ ಮಾಡಲಿ. ಕನ್ನಡನಾಡಿನ ಜನಹಿತಕ್ಕಾಗಿ ಕಾಂಗ್ರೆಸ್ ಸರ್ಕಾರ ಕೈಗೊಳ್ಳುವ ಪ್ರತಿಯೊಂದು ಕ್ರಮಕ್ಕೂ ನಮ್ಮ ಜೆಡಿಎಸ್ ಪಕ್ಷ ಪರಿಪೂರ್ಣ ಬೆಂಬಲ ನೀಡಲಿದೆ” ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
