
ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ
ಕೊಪ್ಪಳ: ಇಲ್ಲಿನ ಕುಷ್ಟಗಿ ತಾಲೂಕಿನ ಕಲಕೇರಿ ಬಳಿ ಕಾರು ಮತ್ತು ಲಾರಿ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ 6 ಮಂದಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ
ರಾಜಪ್ಪ ಬನಗೋಡಿ, ರಾಘವೇಂದ್ರ, ಅಕ್ಷಯ ಶಿವಶರಣ, ಜಯಶ್ರೀ, ರಾಖಿ, ರಶ್ಮಿಕಾ ಮೃತ ದುರ್ದೈವಿಗಳು. ಇವರು ವಿಜಯಪುರದಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದರು. ಈ ವೇಳೆ ಅವಘಡ ಸಂಭವಿಸಿದೆ
ಅಪಘಾತ ಹೇಗಾಯ್ತು?
ವಿಜಯಪುರಿಂದ ಬೆಂಗಳೂರಿಗೆ 6 ಮಂದಿಯಿದ್ದ ಇಂಡಿಕಾ ಕಾರು ಹೊರಟಿತ್ತು. ಕುಷ್ಟಗಿ ತಾಲೂಕಿನ ಕಲಕೇರಿ ಬಳಿ ಬರುತ್ತಿದ್ದಾಗ ಕಾರಿನ ಟೈರ್ ಸ್ಫೋಟಗೊಂಡಿದೆ. ಈ ವೇಳೆ ಕಾರು ನಿಯಂತ್ರಣ ತಪ್ಪಿ ರಸ್ತೆ ಮತ್ತೊಂದು ಬದಿಯಲ್ಲಿ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ.

ಡಿಕ್ಕಿ ಹೊಡೆದ ರಭಸಕ್ಕೆ ಕಾರು ಅಪ್ಪಚ್ಚಿಯಾಗಿದೆ. ಪರಿಣಾಮ ಕಾರಿನಲ್ಲಿದ್ದ 6 ಮಂದಿ ಕೂಡ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅವರಲ್ಲಿ ಎಳೆಯರೂ ಇದ್ದರು ಎನ್ನಲಾಗಿದೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸ್ ಸಿಬ್ಬಂದಿ ಮೃತದೇಹಗಳನ್ನು ಹೊರತೆಗೆಯಲು ಹರಸಾಹಸ ಪಟ್ಟರು. ಕುಷ್ಟಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕೊಪ್ಪಳ ಜಿಲ್ಲೆಯ ಭೀಕರ ಅಪಘಾತಕ್ಕೆ ಸಂತಾಪ ಸೂಚಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಮೃತರ ಕುಟಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.

