
ಮಂಗಳೂರು ನಗರದ ಹಂಪನಕಟ್ಟೆಯಲ್ಲಿರುವ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಜೂನ್ 23 ಮತ್ತು 24ರಂದು ನಡೆಸಲು ಉದ್ದೇಶಿಸಲಾಗಿದ್ದ ಕಾರ್ಯಕ್ರಮವೊಂದನ್ನು ಅನಿವಾರ್ಯ ಕಾರಣದಿಂದ ಮುಂದೂಡಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಜೂನ್ 23ರಂದು ನಡೆಯಬೇಕಿದ್ದ ಪ್ರತಿಭಾ ದಿನಾಚರಣೆ ಮತ್ತು ಜೂನ್ 24ರಂದು ನಡೆಯಬೇಕಿದ್ದ ಕಾಲೇಜು ವಾರ್ಷಿಕೋತ್ಸವವನ್ನು ಮುಂದೂಡಲಾಗಿದೆ. ಈ ಎರಡೂ ದಿನ ಎಂದಿನಂತೆ ತರಗತಿ ನಡೆಯಲಿದೆ. ವಿದ್ಯಾರ್ಥಿಗಳು ಸಮವಸ್ತ್ರ ಧರಿಸಿ ಬರುವಂತೆ ಸೂಚಿಸಿದ್ದಾರೆ. ಈ ಕಾರ್ಯಕ್ರಮಕ್ಕೆ ಬಲಪಂಥೀಯ ಸಂಘಟನೆಯಲ್ಲಿ ಗುರುತಿಸಿರುವ ಪತ್ರಕರ್ತ ಎನ್ನಲಾದ ಶ್ರೀಕಾಂತ್ ಶೆಟ್ಟಿ ಕಾರ್ಕಳ ಎಂಬ ವ್ಯಕ್ತಿಯನ್ನು ಮುಖ್ಯ ಅತಿಥಿಯನ್ನಾಗಿ ಆಹ್ವಾನಿಸಲಾಗಿತ್ತು. ಈ ಬಗ್ಗೆ ಮಾಹಿತಿ ಪಡೆದ ಎನ್‌ಎಸ್‌ಯುಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯು ಆಕ್ಷೇಪ ವ್ಯಕ್ತಪಡಿಸಿ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಮಂಗಳೂರು ವಿವಿ ಕುಲಪತಿಗೆ ಮನವಿ ಸಲ್ಲಿಸಿ ಮತೀಯ ದ್ವೇಷ ಹರಡುವ ಶ್ರೀಕಾಂತ್ ಶೆಟ್ಟಿ ಕಾರ್ಕಳ ಎಂಬ ವ್ಯಕ್ತಿಯನ್ನು ಸರಕಾರಿ ಕಾಲೇಜಿನ ಕಾರ್ಯಕ್ರಮಕ್ಕೆ ಅತಿಥಿಯನ್ನಾಗಿ ಆಹ್ವಾನಿಸಬಾರದು ಎಂದು ಒತ್ತಾಯಿಸಿ ಮನವಿ ಸಲ್ಲಿಸಿತ್ತು.

