
M. Ashraf Kammaje : published 7:48 am


ಬೆಂಗಳೂರು, ಜೂನ್ 26: ಕರ್ನಾಟಕದಲ್ಲಿನ ಹೀನಾಯ ಸೋಲಿನ ಬಳಿಕ ಬಿಜೆಪಿಯಲ್ಲಿ ಅಸಮಾಧಾನದ ಬೆಂಕಿ ಹೊತ್ತಿಕೊಂಡಿದೆ. ಪಕ್ಷದ ಕೆಲ ಮುಖಂಡರು ತಮ್ಮದೇ ಪಕ್ಷದ ನಾಯಕರ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸುತ್ತಿದ್ದಾರೆ. ಕೆಲವರು ಹೊಂದಾಣಿಕೆ ರಾಜಕಾರಣದ ಗೂಬೆ ಕೂರಿಸಿದರೆ, ಇನ್ನು ಕೆಲವರು ಪಕ್ಷ ವಿರೋಧ ಚಟುವಟಕೆ ಬಗ್ಗೆ ಆರೋಪಿಸಿದ್ದಾರೆ. ಇಂತಹ ಸಂದರ್ಭದಲ್ಲೇ, ಕೆಎಸ್ ಈಶ್ವರಪ್ಪ ಮತ್ತೊಂದು ಬಾಂಬ್ ಸಿಡಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಈ ಹಿಂದೆ ಶಿಸ್ತಿನ ಪಕ್ಷವಾಗಿತ್ತು. ಆದರೆ, ಈಗ ಪಕ್ಷದಲ್ಲಿ ಅಶಿಸ್ತಿನ ವಾತಾವರಣವಿದೆ. ಕಾಂಗ್ರೆಸ್ ಪಕ್ಷದಿಂದ ಬಿಜೆಪಿಗೆ ಬಂದಿರುವ ವಲಸಿಗರಿಂದ ಅಶಿಸ್ತು ಮೂಡಿದೆ. ಪಕ್ಷದಲ್ಲಿ ಅಶಿಸ್ತಿನ ಚಟುವಟಿಕೆಯಲ್ಲಿ ತೊಡಗಿದವರ ಬಾಲವನ್ನು ಕಟ್ ಮಾಡುತ್ತೇವೆ ಎಂದು ಹೇಳಿದ್ದಾರೆ. ಕಳೆದ ತಿಂಗಳು ನಡೆದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಆಪರೇಷನ್ ಕಮಲ ಬಿಜೆಪಿ ಗೆಲುವಿಗೆ ಮುಳುವಾಯಿತು. ಕಾಂಗ್ರೆಸ್ ಶಾಸಕರನ್ನು ಪಕ್ಷಕ್ಕೆ ಕರೆದುಕೊಂಡು ಬಂದೆವು. ಅದು ನಮ್ಮ ಸೋಲಿಗೆ ಕಾರಣವಾಗಿದೆ. ನಾವು ಮಾಡಿದ್ದನ್ನು ನಾವೇ ಅನುಭವಿಸಬೇಕಾಗಿದೆ ಎಂದು ಈಶ್ವರಪ್ಪ ಆರೋಪಿಸಿದ್ದಾರೆ.

ಮೋಸ ಮಾಡುವ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ವಿಧಾನಸಭೆ ಚುನಾವಣೆಗೂ ಮುನ್ನ ಪ್ರಣಾಳಿಕೆಯಲ್ಲಿದ್ದ ಐದು ಗ್ಯಾರಂಟಿಗಳ ಬಗ್ಗೆ ಈವರೆಗೂ ಗೊಂದಲ ಬಗೆ ಹರಿದಿಲ್ಲ. ಗ್ಯಾರಂಟಿಳನ್ನು ಅನುಷ್ಠಾನ ಮಾಡುತ್ತೇವೆ ಎನ್ನುತ್ತಾ, ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವಂತ ಕೆಲಸ ಮಾಡುತ್ತಿದೆ ಎಂದು ಈಶ್ವರಪ್ಪ ಕಿಡಿಕಾರಿದರು.

ಮೊದಲ ಕ್ಯಾಬಿನೇಟ್ನಲ್ಲೇ ನಿರುದ್ಯೋಗಿ ಯುವಕರಿಗೆ ಕಾಂಗ್ರೆಸ್ ಸರ್ಕಾರ ಮೋಸ ಮಾಡಿದೆ. ಕೇಂದ್ರ ಸರ್ಕಾರ ಉಚಿತವಾಗಿ ಅಕ್ಕಿ ಕೊಡುತ್ತಿರುವ ವಿಚಾರದಲ್ಲಿ ಯಾರೊಬ್ಬರೂ ಅಭಿನಂದನೆ ಸಲ್ಲಿಸುತ್ತಿಲ್ಲ. ಆದರೆ ಕೇಂದ್ರ ಅಕ್ಕಿ ನೀಡುತ್ತಿಲ್ಲ ಎಂದು ಗೂಬೆ ಕೂರಿಸುತ್ತಿದ್ದಾರೆ. ಸಚಿವ ರಮೇಶ್ ಜಾರಕಿಹೊಳಿ ನಾಚಿಕೆಗೇಡಿನ ಹೇಳಿಕೆ ನೀಡುತ್ತಾರೆ. ಇವರಿಗೆ ಸ್ವಲ್ಪವಾದರೂ ಜವಾಬ್ದಾರಿ ಇದೆಯಾ? ಎಂದು ಪ್ರಶ್ನಿಸಿದರು.

ಸರ್ಕಾರದ ಗ್ಯಾರಂಟಿ ಭರವಸೆಗಳ ವಿರುದ್ಧ ರಾಜ್ಯದ ಜನ ಆಕ್ರೋಶಗೊಂಡಿದ್ದಾರೆ. ಮಹಿಳೆಯರಿಗೆ ಗೃಹಲಕ್ಷ್ಮೀ, ಗೃಹಜ್ಯೋತಿ ಯೋಜನೆಗಳ ಕುರಿತು ಇನ್ನೂ ಸ್ಪಷ್ಟತೆ ಸಿಕ್ಕಿಲ್ಲ. ಈ ಎಲ್ಲ ಯೋಜನೆಗಳ ಅನುಷ್ಠಾನಕ್ಕೆ ಹಣ ಯಾವ ರೀತಿ ಹೊಂದಿಸುತ್ತಾರೆ ಎಂದು ಈವರೆಗೂ ಸ್ಪಷ್ಟಪಡಿಸಿಲ್ಲ. ಕಾಂಗ್ರೆಸ್ ಸರ್ಕಾರದ ಈ ನ್ಯೂನತೆಗಳ ವಿರುದ್ಧ ಬಿಜೆಪಿ ಹೋರಾಟ ಹಮ್ಮಿಕೊಳ್ಳಲಿದೆ. ವಿದ್ಯುತ್ ದರ ಏರಿಕೆ ವಿಚಾರದಲ್ಲಿ ಸರ್ಕಾರ ಸ್ಪಷ್ಟನೆ ನೀಡಬೇಕು. ಮತಾಂತರ ಕಾಯ್ದೆ, ಗೋಹತ್ಯೆ ನಿಷೇಧ ಕಾಯ್ದೆ ಸೇರಿದಂತೆ ನಾವು ಜಾರಿ ಮಾಡಿದ ಕಾಯ್ದೆಗಳನ್ನು ವಾಪಸ್ ತೆಗೆದುಕೊಳ್ಳಲು ಕಾಂಗ್ರೆಸ್ ಹೊರಟಿದೆ ಎಂದು ಆರೋಪಿಸಿದರು.