
ಬೆಂಗಳೂರು: ನಾಲ್ಕು ರಾಜ್ಯಗಳ ಚುನಾವಣೆಯ ಅಧಿಕೃತ ಫಲಿತಾಂಶ ಕೆಲವೇ ಕ್ಷಣಗಳಲ್ಲಿ ಹೊರಬೀಳಲಿದ್ದು, ಮೂರು ರಾಜ್ಯಗಳಲ್ಲಿ ಬಿಜೆಪಿ, ಒಂದರಲ್ಲಿ ಕಾಂಗ್ರೆಸ್ ಜಯಗಳಿಸಿರುವುದು ಬಹುತೇಕ ಖಚಿತವಾಗಿದೆ. ಹೀಗಾಗಿ ನಾವು ಸೋಲಿನಿಂದ ಕುಗ್ಗುವುದಿಲ್ಲ, ಗೆಲುವಿನಿಂದ ಹಿಗ್ಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ.

ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಸುದೀರ್ಘವಾಗಿ ಬರೆದುಕೊಂಡಿರುವ ಸಿಎಂ, ತೆಲಂಗಾಣದಲ್ಲಿ ಕಾಂಗ್ರೆಸ್ ಗೆಲುವಿಗೆ ಕಾರಣವನ್ನು ತಿಳಿಸಿದರು. ಗೆಲುವಿನಲ್ಲಿ ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳ ಯಶಸ್ಸು ಮತ್ತು ಕಾಂಗ್ರೆಸ್ ಪಕ್ಷದ ನಾಯಕರ ಶ್ರಮದ ದೊಡ್ಡ ಪಾತ್ರ ಇದೆ ಎಂದು ತಿಳಿಸಿದ್ದಾರೆ.
ಎಕ್ಸ್ ಖಾತೆಯಲ್ಲಿ ಬರೆದಿದ್ದೇನು..?: ಪ್ರಜಾಪ್ರಭುತ್ವದಲ್ಲಿ ಸೋಲು-ಗೆಲುವುಗಳು ಸ್ವಾಭಾವಿಕ. ಪ್ರತಿಯೊಂದು ಚುನಾವಣಾ ಫಲಿತಾಂಶದಲ್ಲಿ ರಾಜಕೀಯ ಪಕ್ಷಗಳು ಕಲಿಯುವ ಪಾಠ ಇದೆ. ನಾವು ಸೋಲಿನಿಂದ ಕುಗ್ಗುವುದಿಲ್ಲ, ಗೆಲುವಿನಿಂದ ಹಿಗ್ಗುವುದಿಲ್ಲ. ನಾಲ್ಕು ರಾಜ್ಯಗಳ ಚುನಾವಣೆಗಳ ಪೈಕಿ ತೆಲಂಗಾಣದಲ್ಲಿ ಕಾಂಗ್ರೆಸ್ ಸ್ಪಷ್ಟ ಗೆಲುವು ಸಾಧಿಸಿದೆ. ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್ಗಢಗಳಲ್ಲಿ ಹಿನ್ನಡೆ ಆಗಿದೆ.

ತೆಲಂಗಾಣ (Telangana Election Results) ನಮ್ಮ ನೆರೆಯ ರಾಜ್ಯವಾಗಿರುವ ಕಾರಣ ಅಲ್ಲಿನ ಗೆಲುವಿನಲ್ಲಿ ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳ ಯಶಸ್ಸು ಮತ್ತು ಕಾಂಗ್ರೆಸ್ ಪಕ್ಷದ ನಾಯಕರ ಶ್ರಮದ ದೊಡ್ಡ ಪಾತ್ರ ಇದೆ. ವರ್ಷದ ಹಿಂದೆ ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎನ್ನುವುದನ್ನು ಯಾರೂ ನಿರೀಕ್ಷಿಸಿರಲಿಲ್ಲ. ರಾಹುಲ್ ಗಾಂಧಿಯವರ (Rahul Gandhi) ಭಾರತ್ ಜೋಡೋ (Bharat Jodo) ಕಾರ್ಯಕ್ರಮ ಅಲ್ಲಿನ ಪಕ್ಷದ ಕಾರ್ಯಕರ್ತರನ್ನು ಇನ್ನಷ್ಟು ಹುರಿದುಂಬಿಸಿದ್ದು ನಿಜ. ಅದರ ನಂತರ ಬಹಳ ವ್ಯವಸ್ಥಿತವಾದ ಪ್ರಚಾರ ನಡೆಯಿತು.

ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಗೆಲುವು ಮತ್ತು ನುಡಿದಂತೆ ನಡೆದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು, ತೆಲಂಗಾಣದ ಮತದಾರರು ಕಾಂಗ್ರೆಸ್ ಪಕ್ಷದ ಮೇಲೆ ಭರವಸೆ ಇಡುವಂತಾಯಿತು. ಬಿಜೆಪಿ ಬಿಆರ್ಎಸ್ ಪಕ್ಷದ ಜೊತೆ ಒಳ ಒಪ್ಪಂದ ಮಾಡಿಕೊಂಡಿದ್ದು, ಮತದಾರರು ಎರಡು ಪಕ್ಷಗಳ ಮೇಲೆ ಭರವಸೆ ಕಳೆದುಕೊಳ್ಳುವಂತೆ ಮಾಡಿತು. ಈ ಒಳ ಒಪ್ಪಂದದ ತಂತ್ರಗಾರಿಕೆಯನ್ನು ಕಾಂಗ್ರೆಸ್ ಪಕ್ಷ ಪ್ರಚಾರದ ಸಮಯದಲ್ಲಿ ಬಯಲು ಮಾಡಿದ್ದು ಕೂಡಾ ನಮ್ಮ ಗೆಲುವಿಗೆ ಕಾರಣ.

ತೆಲಂಗಾಣದಲ್ಲಿ ಒಟ್ಟು 119 ವಿಧಾನಸಭಾ ಕ್ಷೇತ್ರಗಳ ಪೈಕಿ ಕಾಂಗ್ರೆಸ್ 64 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದರೆ, ಬಿಆರ್ಎಸ್ 40, ಬಿಜೆಪಿ 8, ಎಐಎಂಐಎಂ 7 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.