
ಬೆಂಗಳೂರು: ಬಿಜೆಪಿ ವಿರುದ್ಧ ಬಂಡಾಯ ಸಾರಿದ್ದ ಪುತ್ತೂರಿನ ಪ್ರಭಾವಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರು ಗುರುವಾರ ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಗುರುವಾರ ರಾತ್ರಿ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಪಕ್ಷ ಸೇರ್ಪಡೆ ವೇಳೆ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಶಾಸಕ ಸುನಿಲ್ ಕುಮಾರ್ ಕಾರ್ಕಳ ಅವರು ಉಪಸ್ಥಿತರಿದ್ದರು. ಪಕ್ಷದ ಹಿರಿಯ ನಾಯಕ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಅರುಣ್ ಕುಮಾರ್ ಪುತ್ತಿಲ ಅವರು ಮಾತುಕತೆ ನಡೆಸಿದ್ದಾರೆ.ಬಿಜೆಪಿ ದಕ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಪುತ್ತೂರು ಗ್ರಾಮಾಂತರ ಮತ್ತು ನಗರ ಮಂಡಲ ಸಮಿತಿ ಅಧ್ಯಕ್ಷರು ಉಪಸ್ಥಿತರಿದ್ದರು.

ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಸಿಗದ ಕಾರಣಕ್ಕೆ ಬಂಡಾಯವೆದ್ದಿದ್ದ ಪುತ್ತಿಲ ಅವರು ಪಕ್ಷೇತರರಾಗಿ 62,458 ಮತಗಳನ್ನು ಪಡೆದಿದ್ದರು. ಬಿಜೆಪಿ ಮೂರನೇ ಸ್ಥಾನಕ್ಕೆ ಇಳಿದಿತ್ತು. ಹಲವು ಬಾರಿ ಮಾತುಕತೆ ವಿಫಲವಾಗಿತ್ತು, ಆದರೆ ನಳಿನ್ ಕುಮಾರ್ ಕಟೀಲ್ ಅವರ ಜಾಗಕ್ಕೆ ಚೌಟ ಅವರ ಹೆಸರು ಘೋಷಣೆಯಾಗುತ್ತಿದ್ದಂತೆ ಪುತ್ತಿಲ ಅವರು ಬಿಜೆಪಿಗೆ ಮರಳಿದ್ದಾರೆ


