
ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಯಲಾಗಿರುವ ಒಂದು ಸುದ್ದಿ ತೀವ್ರ ಸಂಚಲನ ಸೃಷ್ಟಿಸಿದೆ. ಶಿವಮೊಗ್ಗದ ಬಿಜೆಪಿ ಮುಖಂಡನನ್ನು ರಾಷ್ಟ್ರೀಯ ತನಿಖಾ ದಳ ವಶಕ್ಕೆ ಪಡೆದಿದೆ ಎನ್ನಲಾಗಿತ್ತು. ಈ ಬಗ್ಗೆ ಬಿಜೆಪಿ ಮೇಲೆ ಕಾಂಗ್ರೆಸ್ ನಾಯಕರು ಗಂಭೀರ ಆರೋಪ ಮಾಡಿದ್ದು, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಸೋಷಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಪೋಸ್ಟ್ ಮಾಡಿದ್ದಾರೆ.

ರಾಮೇಶ್ವರಂ ಕೆಫೆ ಸ್ಫೋಟಕ್ಕೆ ನಮ್ಮ ಸರ್ಕಾರವೇ ಕಾರಣ ಅನ್ನುವಂತೆ ಮಾತನಾಡುತ್ತಿದ್ದ ರಾಜ್ಯದ ಕೇಸರಿ ಕಲಿಗಳು ಈಗ ಏನು ಹೇಳುತ್ತಾರೆ? ರಾಷ್ಟ್ರದ ಭದ್ರತೆ ವಿಚಾರವನ್ನೂ ಲೆಕ್ಕಿಸದೇ ರಾಮೇಶ್ವರಂ ಬಾಂಬ್ ಸ್ಫೋಟ ಪ್ರಕರಣವನ್ನು ಕಾಂಗ್ರೆಸ್ ಸರ್ಕಾರದ ಮೇಲೆ ಹೊರೆಸಿದ ರಾಜ್ಯ ಬಿಜೆಪಿ ನಾಯಕರು ಈಗ ಉತ್ತರ ನೀಡಲೇ ಬೇಕು ಎಂದು ದಿನೇಶ್ ಗುಂಡೂರಾವ್ ಅವರು ಒತ್ತಾಯಿಸಿದ್ದಾರೆ.


ಇದೇ ಪ್ರಕರಣಕ್ಕೆ ಸಂಬಂಧಪಟ್ಟಂತೆ ದೇಶದ 18 ಕಡೆ ದಾಳಿ ಮಾಡಿ ಪರಿಶೀಲನೆ ಮಾಡಲಾಗಿದೆ. ಈಗಾಗಲೇ ಇಬ್ಬರು ಆರೋಪಿಗಳ ಸುಳಿವಿಗೆ ತಲಾ 10 ಲಕ್ಷ ರೂಪಾಯಿ ಬಹುಮಾನವನ್ನು ಘೋಷಣೆ ಮಾಡಲಾಗಿದೆ. NIA ಎಲ್ಲಾ ಆಯಾಮದಲ್ಲೂ ಪ್ರಕರಣದ ತನಿಖೆ ಮಾಡುತ್ತಿದೆ. ಈ ತನಿಖೆಯ ಭಾಗವಾಗಿ ಆರೋಪಿಗಳ ಸಹಪಾಠಿಗಳು, ಸ್ನೇಹಿತರು, ಬಂಧಿತ ಆರೋಪಿಗಳು ಎಲ್ಲರ ವಿಚಾರಣೆ ನಡೆಯುತ್ತಿದೆ. ಇದು ಭಯೋತ್ಪಾದಕ ಕೃತ್ಯ ಆಗಿರುವುದರಿಂದ ವಿಚಾರಣೆ ಮಾಡುವವರ ವಿವರಗಳನ್ನ ಬಹಿರಂಗಪಡಿಸುವುದು ತನಿಖೆಗೆ ಹಿನ್ನಡೆ ಆಗುತ್ತೆ. ಹೀಗಾಗಿ ತಲೆಮರೆಸಿಕೊಂಡಿರುವ ಆರೋಪಿಗಳ ಬಂಧನಕ್ಕೆ ಸಹಕರಿಸಲು ಮನವಿ ಮಾಡಿಕೊಳ್ಳಲಾಗಿದೆ.

ಅದರ ಬೆನ್ನಲ್ಲೆ ತೀರ್ಥಹಳ್ಳಿಯ ಬಿಜೆಪಿಯ ಘಟಕದ ಮುಖಂಡನನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ತಿಳಿದು ಬಂದಿದೆ.ಈ ಹಿಂದೆ ಮೊಬೈಲ್ ಅಂಗಡಿಯ ಇಬ್ಬರು ಯುವಕರನ್ನು ವಿಚಾರಣೆ ನಡೆಸಿದ್ದ ಎನ್ಐಎ ತಂಡ ಈ ಹುಡುಗರ ಜೊತೆ ನಗರ ಘಟಕದ ಮುಖಂಡ ಸಂಪರ್ಕ ಇದ್ದ ಕಾರಣ ವಿಚಾರಣೆಗೆ ಒಳಪಡಿಸಿರಬಹುದು ಎಂದು ಹೇಳಲಾಗುತ್ತಿದೆ.
ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಥಹಳ್ಳಿಯ ಬಿಜೆಪಿ ಮುಖಂಡ ಸಾಯಿಪ್ರಸಾದ್ನನ್ನು ರಾಷ್ಟ್ರೀಯ ತನಿಖಾ ದಳದವರು ವಶಕ್ಕೆ ಪಡೆದಿದ್ದಾರೆ. ಸ್ಫೋಟಕ್ಕೆ ನಮ್ಮ ಸರ್ಕಾರವೇ ಕಾರಣ ಅನ್ನೋವಂತೆ ಮಾತಾನಾಡುತ್ತಿದ್ದ ರಾಜ್ಯದ ಕೇಸರಿ ಕಲಿಗಳು ಈಗ ಏನು ಹೇಳುತ್ತಾರೆ? ಬಿಜೆಪಿ ಮುಖಂಡನನ್ನು NIA ವಶಕ್ಕೆ ಪಡೆದಿದೆ ಎಂದ ಮೇಲೆ ರಾಮೇಶ್ವರಂ ಕೆಫೆ ಸ್ಫೋಟದಲ್ಲಿ ಬಿಜೆಪಿ ಕೈವಾಡ ಇದೆ ಎಂದು ಅರ್ಥಅಲ್ಲವೇ? ಧರ್ಮ ರಕ್ಷಣೆ ಹೆಸರಲ್ಲಿ ರಾಜ್ಯದಲ್ಲಿ ಬಿಜೆಪಿ ನಡೆಸುತ್ತೀರೋ ಕೇಸರಿ ಭಯೋತ್ಪಾದನೆ ಎಷ್ಟು ಗಂಭೀರ ಸಮಸ್ಯೆಗಳನ್ನು ಹುಟ್ಟು ಹಾಕುತ್ತಿದೆ ಅನ್ನೋದಕ್ಕೆ ಇದಕ್ಕಿಂತಾ ಸಾಕ್ಷಿ ಬೇಕಾ? ಆರ್ಎಸ್ಎಸ್ ಸಿದ್ಧಾಂತಗಳನ್ನು ದೇಶದ ಮೇಲೆ ಹೇರುತ್ತಿರುವ ಕೇಂದ್ರ ಬಿಜೆಪಿಯು ಇದಕ್ಕೇನು ಹೇಳುತ್ತದೆ? ಎಂದು ಪ್ರಶ್ನಿಸಿದ್ದಾರೆ.