ಫೆಂಗಲ್ ಚಂಡಮಾರುತದ ಪರಿಣಾಮ ದಕ್ಷಿಣ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್ ನೀಡಲಾಗಿದ್ದು, ಮೀನುಗಾರಿಕೆಗೆ ತೆರಳದಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.
ಮಂಗಳೂರು: ಫೆಂಗಲ್ ಚಂಡಮಾರುತದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಮೀನುಗಾರಿಕೆಗೆ ತೆರಳದಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚನೆ ನೀಡಿದ್ದಾರೆ.

ಇಂದು, ನಾಳೆ ಆರೆಂಜ್ ಅಲರ್ಟ್: ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ, ಬಂಗಾಳ ಕೊಲ್ಲಿಯಲ್ಲಿ ಫೆಂಗಲ್ ಚಂಡಮಾರುತ ಉಂಟಾಗಿರುವ ಪರಿಣಾಮ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆಗಳಿವೆ. ಇಂದು ಮತ್ತು ನಾಳೆ ಆರೆಂಜ್ ಅಲರ್ಟ್ ಘೋಷಣೆಯಾಗಿದ್ದು, ಜನರು ಮುಂಜಾಗೃತಾ ಕ್ರಮವಾಗಿ ಜಿಲ್ಲಾಡಳಿತದ ಸೂಚನೆ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಮೀನುಗಾರರು, ಸಾರ್ವಜನಿಕರಿಗೆ ಸೂಚನೆ: ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳಬಾರದು ಹಾಗೂ ಮೀನುಗಾರಿಕೆಗೆ ತೆರಳಿರುವ ಎಲ್ಲರೂ ಕೂಡಲೇ ದಡ ಸೇರಬೇಕು. ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಸಮುದ್ರ ತೀರಕ್ಕೆ ಸಾರ್ವಜನಿಕರು, ಪ್ರವಾಸಿಗರು ತೆರಳದೆ ಜಾಗ್ರತೆ ವಹಿಸಬೇಕು. ಪ್ರಾಕೃತಿಕ ವಿಕೋಪದಿಂದ ಯಾವುದೇ ರೀತಿಯ ಘಟನೆಗಳು ಸಂಭವಿಸಿದಲ್ಲಿ ಅಥವಾ ಸಂಭವಿಸಬಹುದಾದ ಸೂಚನೆ ಇದ್ದರೆ ಸಾರ್ವಜನಿಕರು ಕೂಡಲೇ ಸಂಬಂಧಪಟ್ಟ ಪಂಚಾಯತ್/ನಗರ ಸ್ಥಳೀಯ ಸಂಸ್ಥೆಗಳಿಗೆ ಮಾಹಿತಿ ನೀಡಬೇಕು. ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ 1077 ಅಥವಾ 0824-2442590 ದೂರವಾಣಿಯನ್ನು ಸಂಪರ್ಕಿಸಿ ಎಂದು ಜಿಲ್ಲಾಧಿಕಾರಿ ಸೂಚಿಸಿದ್ದಾರೆ.