RSS ಚಟುವಟಿಕೆ ನಿರ್ಬಂಧಿಸುವ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಸಾರ್ವಜನಿಕ, ಸರ್ಕಾರಕ್ಕೆ ಸಂಬಂಧಿಸಿದ ಸ್ಥಳದಲ್ಲಿ ಆರೆಸ್ಸೆಸ್ ಚಟುವಟಿಕೆಗೆ ನಿರ್ಬಂಧ ವಿಧಿಸುವ ಬಗ್ಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪ್ರಸ್ತಾವನೆ ಸಲ್ಲಿಕೆಯಾಗಿದೆ.
ಬೆಂಗಳೂರು, ಅಕ್ಟೋಬರ್ 12: 100 ವರ್ಷಗಳನ್ನ ಪೂರೈಸಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಶಾಕ್ ಕೊಡಲು ರಾಜ್ಯ ಸರ್ಕಾರ ಮುಂದಾಗಿದೆ. ಸಾರ್ವಜನಿಕ, ಸರ್ಕಾರಕ್ಕೆ ಸಂಬಂಧಿಸಿದ ಸ್ಥಳದಲ್ಲಿ ಆರೆಸ್ಸೆಸ್ ಚಟುವಟಿಕೆಗೆ ನಿರ್ಬಂಧ ವಿಧಿಸುವ ಬಗ್ಗೆ ಗಂಭೀರ ಚಿಂತನೆ ನಡೆದಿದೆ ಎನ್ನಲಾಗಿದೆ. ಈ ಬಗ್ಗೆ ಕೆಲ ಶಾಸಕರು ಸಿಎಂಗೆ ಪ್ರಸ್ತಾವನೆ ಕೂಡ ಸಲ್ಲಿಸಿದ್ದಾರೆ. ಶಾಲಾ ಕಾಲೇಜುಗಳ ಆವರಣ, ಉದ್ಯಾನವನ, ಸರ್ಕಾರಿ ಮೈದಾನ ಮತ್ತು ಹಾಸ್ಟೆಲ್ ಕ್ಯಾಂಪಸ್ನಲ್ಲಿ RSS ಚಟುವಟಿಕೆ ನಿರ್ಬಂಧಿಸಲು ಪ್ರಸ್ತಾವನೆಯಲ್ಲಿ ಆಗ್ರಹಿಸಲಾಗಿದೆ. RSS ಚಟುವಟಿಕೆ ನಿರ್ಬಂಧಿಸುವ ಬಗ್ಗೆ ಈಗಾಗಲೇ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪ್ರಸ್ತಾವನೆ ಸಲ್ಲಿಕೆಯಾಗಿದೆ
ಸರ್ಕಾರಕ್ಕೆ ಸಲ್ಲಿಕೆಯಾದ ಪ್ರಸ್ತಾವನೆಯಲ್ಲಿ ಏನಿದೆ?
- ಜನರಲ್ಲಿ ದ್ವೇಷ ಬಿತ್ತುವ ವಿಭಜಕ ಶಕ್ತಿಗಳು ತಲೆ ಎತ್ತಿದಾಗ ಅವುಗಳನ್ನು ನಿಗ್ರಹಿಸುವುಕ್ಕಾಗಿ ಸಮಾನತೆ ಮತ್ತು ಏಕತೆಯ ಮೂಲಭೂತ ತತ್ತ್ವಗಳನ್ನೊಳಗೊಂಡ ಸಂವಿಧಾನವು ನಮಗೆ ಅಧಿಕಾರವನ್ನು ನೀಡುತ್ತದೆ.
- ರಾಷ್ಟ್ರೀಯ ಸ್ವಯಂಸೇವಕ ಸಂಘ ಎಂಬ ಹೆಸರಿನ ಸಂಘಟನೆಯು ಸರಕಾರಿ ಮತ್ತು ಅನುದಾನಿತ ಶಾಲೆಗಳು ಹಾಗೂ ಸಾರ್ವಜನಿಕ ಸರಕಾರಿ ಮೈದಾನಗಳನ್ನು ಬಳಸಿಕೊಂಡು ಶಾಖೆ ನಡೆಸುತ್ತಾ, ಘೋಷಣೆಗಳನ್ನು ಕೂಗುತ್ತಾ ಮಕ್ಕಳು ಮತ್ತು ಯುವ ಸಮುದಾಯದ ಮನಸಿನಲ್ಲಿ ಭಾರತದ ಏಕತೆಯ ಹಾಗೂ ಸಂವಿಧಾನದ ಆಶಯಗಳ ವಿರುದ್ಧ ನಕಾರಾತ್ಮಕ ಆಲೋಚನೆ ತುಂಬುತ್ತಿದೆ.
- ಪೊಲೀಸ್ ಅನುಮತಿ ಪಡೆಯದೆ ದೊಣ್ಣೆಗಳನ್ನು ಹಿಡಿದು ಆಕ್ರಮಣಕಾರಿ ಪ್ರದರ್ಶನ ನಡೆಸುವ ಮೂಲಕ ಮುಗ್ಧ ಮಕ್ಕಳು ಹಾಗೂ ಯುವಜನರ ಮನಸಿನ ಮೇಲೆ ದುಷ್ಪರಿಣಾಮ ಬೀರುತ್ತಿದೆ.
- ಸರಕಾರಿ ಶಾಲೆಗಳು ಹಾಗೂ ಸರಕಾರದ ಅನುದಾನಿತ ಶಾಲೆಗಳು ಮತ್ತು ಮೈದಾನಗಳು, ಉದ್ಯಾನವನಗಳು, ಮುಜರಾಯಿ ಇಲಾಖೆಯ ದೇವಸ್ಥಾನಗಳು, ಪುರಾತತ್ವ ಇಲಾಖೆಯ ಸ್ಥಳಗಳು ಸೇರಿದಂತೆ ಯಾವುದೇ ಸರ್ಕಾರಿ ಸ್ಥಳಗಳಲ್ಲಿ RSS ಸಂಘಟನೆಯು ಶಾಖೆ ಹೆಸರಲ್ಲಿ ನಡೆಸುವ ಚಟುವಟಿಕೆಗಳಿಗೆ ನಿಷೇಧ ಹೇರಬೇಕು.
RSS ಕಾನೂನು ಬಾಹಿರ ಸಂಘಟನೆ
RSS ನೋಂದಣಿ ಆಗದೇ ಇರುವ ಸಂಘಟನೆಯಾಗಿದ್ದು, ನೋಂದಣಿ ಆಗಿದ್ದರೆ ಅವರು ನಮಗೆ ತೋರಿಸಲಿ ಎಂದು ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಸವಾಲು ಹಾಕಿದ್ದಾರೆ. RSSನವರಿಗೆ ಪೊಲೀಸರು ಪರ್ಮಿಷನ್ ಕೊಟ್ಟಿದ್ದೇಕೆ? ತಮಿಳುನಾಡಿನ ಶಾಲೆಯಲ್ಲಿ RSS ಕಾರ್ಯಕ್ರಮ ನಡೆದಿತ್ತು. ಅನುಮತಿ ಇಲ್ಲದೆ ಕಾರ್ಯಕ್ರಮ ನಡೆಸಿದ್ದಕ್ಕೆ ಕೇಸ್ ಹಾಕಲಾಗಿದೆ. ನಮ್ಮಲ್ಲೂ ತಮಿಳುನಾಡಿನಂತೆ ಮಾಡಬೇಕೆಂದು ಹರಿಪ್ರಸಾದ್ ಆಗ್ರಹಿಸಿದ್ದಾರೆ.