

ಹುಬ್ಬಳ್ಳಿ: ಕಾಂಗ್ರೆಸ್ (Congress) ಪಕ್ಷದಲ್ಲಿ ಯಾವುದೇ ಮ್ಯಾಚ್ ಫಿಕ್ಸಿಂಗ್ ಆಗಿಲ್ಲ, ಯಾವುದೇ ಬಣಗಳೂ ಇಲ್ಲ. ಈ ಬಾರಿ ಚುನಾವಣೆಯಲ್ಲಿ (Election) ಶೇ.95 ಮಂದಿ ಹಾಲಿ ಶಾಸಕರಿಗೆ ಟಿಕೆಟ್ ಸಿಗೋದು ಖಚಿತ ಎಂದು ಕೆಪಿಸಿಸಿ (KPCC) ಅಧ್ಯಕ್ಷ ಡಿ.ಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ನನ್ನ ಅಧ್ಯಕ್ಷತೆಯಲ್ಲಿ ಒಳ ಒಪ್ಪಂದಕ್ಕೆ ಅವಕಾಶ ನೀಡಲ್ಲ ಕಾಂಗ್ರೆಸ್ ಪಕ್ಷದಲ್ಲಿ ಮ್ಯಾಚ್ ಫಿಕ್ಸಿಂಗ್ ಆಗಿಲ್ಲ. ಈಗಾಗಲೇ ಪಕ್ಷದ ಅಭ್ಯರ್ಥಿಗಳ ಮೊದಲ ಹಂತದ ಪಟ್ಟಿ ಬಹುತೇಕ ಸಿದ್ಧಗೊಂಡಿದೆ. ಟಿಕೆಟ್‌ಗಾಗಿ ಕಾಂಗ್ರೆಸ್ ನಲ್ಲಿ ಯಾವುದೇ ಕಿತ್ತಾಟ ನಡೆದಿಲ್ಲ. ಜಗದೀಶ್ ಶೆಟ್ಟರ್ ಸೇರಿದಂತೆ ಬಿಜೆಪಿ ನಾಯಕರ ಕ್ಷೇತ್ರಗಳಲ್ಲಿಯೂ ಪ್ರಬಲ ಪೈಪೋಟಿ ನೀಡಲು ಸಿದ್ಧತೆ ನಡೆದಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಇನ್ನೂ ಆಪರೇಷನ್ ಕಮಲಕ್ಕೆ ಗುರಿಯಾಗಿ ಬಿಜೆಪಿಗೆ (BJP) ಹೋದವರ ಮರು ಸೇರ್ಪಡೆ ವಿಚಾರವಾಗಿ ಮಾತನಾಡಿದ ಅವರು, ರಾಜಕೀಯದಲ್ಲಿ (Politics) ಏನೂ ಬೇಕಾದ್ರೂ ನಡೆಯಬಹುದು. ಪಕ್ಷ ಬಿಟ್ಟು ಹೋದವರು ಈವರೆಗೆ ಅರ್ಜಿ ಸಲ್ಲಿಸಿಲ್ಲ. ಅರ್ಜಿ ಸಲ್ಲಿಸಿದ್ರೆ ಹೇಳ್ತೀನಿ ಎಂದು ಹೇಳಿದ್ದಾರೆ.
ಮಾಜಿ ಸಚಿವ ಸಂತೋಷ್ ಲಾಡ್ ರಾಷ್ಟ್ರೀಯ ನಾಯಕರಿದ್ದಾರೆ. ನನ್ನನ್ನು ಮತ್ತು ಸಿದ್ದರಾಮಯ್ಯ (Siddaramaiah) ಅವರನ್ನು ಚುನಾವಣೆಗೆ ಸ್ಪರ್ಧಿಸದೇ ರೆಸ್ಟ್ ಮಾಡುವಂತೆ ಹೇಳಿದ್ದಾರೆ. ಅವರ ಸಲಹೆಯನ್ನು ನಾನು ಗಂಭೀರವಾಗಿ ಪರಿಗಣಿಸುತ್ತೇನೆ ಎಂದು ಟಾಂಗ್ ನೀಡಿದ್ದಾರೆ.