

ಬೆಂಗಳೂರು (ಮಾ.5) : ಕೊಡಿಗೇಹಳ್ಳಿ ಪೊಲೀಸ್ ಠಾಣೆ ಸಮೀಪದ ಬಿಬಿಎಂಪಿ ಜಾಗದಲ್ಲಿ ಸಂಭವಿಸಿದ ಆಕಸ್ಮಿಕ ಬೆಂಕಿ ಅವಘಡದಲ್ಲಿ 58 ದ್ವಿಚಕ್ರ ವಾಹನಗಳು ಸುಟ್ಟು ಕರಕಲಾಗಿರುವ ಘಟನೆ ಭಾನುವಾರ ನಡೆದಿದೆ.
ಕೊಡಿಗೇಹಳ್ಳಿ ಠಾಣೆ ಪೊಲೀಸರು(Kodigehalli police) ವಿವಿಧ ಪ್ರಕರಣಗಳಲ್ಲಿ ಜಪ್ತಿ(confiscated) ಮಾಡಲಾದ ದ್ವಿಚಕ್ರ ವಾಹನ, ಕಾರುಗಳು, ಕ್ಯಾಂಟರ್ ವಾಹನಗಳನ್ನು ಹಲವು ವರ್ಷಗಳಿಂದ ಠಾಣೆ ಸಮೀಪದ ಬಿಬಿಎಂಪಿ(BBMP) ಜಾಗದಲ್ಲಿ ನಿಲ್ಲಿಸಲಾಗಿತ್ತು. ಹೀಗಾಗಿ ಆ ಜಾಗದಲ್ಲಿ ಗಿಡಗಂಟಿಗಳು ಬೆಳೆದಿದ್ದವು. ಭಾನುವಾರ ಮಧಾಹ್ನ ಒಂದು ಗಂಟೆ ಸುಮಾರಿಗೆ ಆ ಜಾಗದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ವಾಹನಗಳಿಗೆ ಬೆಂಕಿ ವ್ಯಾಪಿಸಿ ಹೊತ್ತಿ ಉರಿದಿದೆ. ಇದರಿಂದ 58 ದ್ವಿಚಕ್ರ ವಾಹನಗಳು ಬೆಂಕಿಗಾಹುತಿಯಾಗಿವೆ.

ಬೆಂಕಿ ಕಾಣಿಸಿಕೊಂಡ ತಕ್ಷಣ ಸ್ಥಳೀಯರು ಅಗ್ನಿಶಾಮಕ ನಿಯಂತ್ರಣ ಕೊಠಡಿಗೆ ಮಾಹಿತಿ ನೀಡಿದ್ದಾರೆ. ಸುದ್ದಿ ತಿಳಿದ ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಎರಡು ವಾಹನಗಳೊಂದಿಗೆ ಸ್ಥಳಕ್ಕೆ ಬಂದು ಸುಮಾರು ಒಂದೂವರೆ ಗಂಟೆ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ.
ಕೊಡಿಗೇಹಳ್ಳಿ ಠಾಣೆ ಪೊಲೀಸರು ಕಳ್ಳತನ, ವ್ಹೀಲಿಂಗ್ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಿದ್ದು, ಠಾಣೆ ಸಮೀಪದ ಬಿಬಿಎಂಪಿ ಜಾಗದಲ್ಲಿ ನಿಲ್ಲಿಸಿದ್ದರು. ಹಲವು ವರ್ಷಗಳಿಂದ ವಾಹನಗಳನ್ನು ನಿಲ್ಲಿಸಿದ್ದರಿಂದ ಆ ಜಾಗ ಗುಜರಿ ಅಂಗಡಿಯಂತೆ ಆಗಿತ್ತು. ಪೊಲೀಸರು ಜಪ್ತಿ ಮಾಡಿದ ವಾಹನಗಳನ್ನು ವಿಲೇವಾರಿ ಮಾಡಲು ವಿಳಂಬ ಮಾಡುತ್ತಿರುವುದರಿಂದ ಠಾಣೆಗಳ ಬಳಿ ವಾಹನಗಳು ತುಕ್ಕು ಹಿಡಿದು ಹಾಳಾಗುತ್ತಿವೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ಜಪ್ತಿ ವಾಹನಗಳನ್ನು ನಿಲುಗಡೆ ಮಾಡಿದ ಸ್ಥಳದ ಸಮೀಪವೇ ಬೆಸ್ಕಾಂ ಟ್ರಾನ್ಸ್ಫಾರ್ಮರ್ ಇದೆ. ಶಾರ್ಚ್ಸಕ್ರ್ಯೂಟ್ನಿಂದ ಬೆಂಕಿ ಹೊತ್ತಿಕೊಂಡು ವಾಹನಗಳಿಗೆ ಬೆಂಕಿ ವ್ಯಾಪಿಸಿರುವ ಸಾಧ್ಯತೆಯಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.