

ಬೆಂಗಳೂರು (ಮಾ.09): ರಾಜ್ಯ ವಿಧಾನಸಭಾ ಚುನಾವಣೆಯನ್ನು ಮುಕ್ತ ಹಾಗೂ ಪಾರದರ್ಶಕವಾಗಿ ನಡೆಸಬೇಕು. ಉತ್ತರ ಪ್ರದೇಶ ಹಾಗೂ ಗುಜರಾತ್ ಸೇರಿದಂತೆ ಬಿಜೆಪಿ ಗೆಲುವು ಸಾಧಿಸಿದ ರಾಜ್ಯಗಳಲ್ಲಿ ಬಳಸಿದ ವಿದ್ಯುನ್ಮಾನ ಮತಯಂತ್ರ (ಇವಿಎಂ)ಗಳನ್ನು ರಾಜ್ಯದಲ್ಲಿ ಬಳಸಬಾರದು. 224 ಕ್ಷೇತ್ರದಲ್ಲಿ ಒಂದೇ ಹಂತದಲ್ಲಿ ಚುನಾವಣೆ ಮಾಡಬೇಕು ಎಂದು ಪ್ರತಿಪಕ್ಷ ಕಾಂಗ್ರೆಸ್ ಕೇಂದ್ರ ಚುನಾವಣಾ ಆಯೋಗಕ್ಕೆ ಮನವಿ ಮಾಡಿದೆ. ವಿಧಾನಸೌಧದಲ್ಲಿ ಗುರುವಾರ ಕೇಂದ್ರ ಚುನಾವಣಾ ಆಯೋಗದ ಅಧಿಕಾರಿಗಳ ತಂಡ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಜೊತೆ ಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸಿತು. ಈ ವೇಳೆ, ಕಾಂಗ್ರೆಸ್ ನಾಯಕ, ಮಾಜಿ ಸಂಸದ ವಿ.ಎಸ್.ಉಗ್ರಪ್ಪ ನೇತೃತ್ವದ ಕಾಂಗ್ರೆಸ್ ನಿಯೋಗವು ಆಯೋಗಕ್ಕೆ ಪಕ್ಷದ ಮನವಿ ಸಲ್ಲಿಸಿತು.

ಬಳಿಕ ಮಾತನಾಡಿದ ಉಗ್ರಪ್ಪ ಅವರು, ರಾಜ್ಯದಲ್ಲಿ ಮುಕ್ತ ಹಾಗೂ ಪಾರದರ್ಶಕವಾಗಿ ಚುನಾವಣೆ ನಡೆಸಲು ಮತಪಟ್ಟಿಯಿಂದ ಕೈಬಿಟ್ಟಿರುವ 33 ಲಕ್ಷ ಮತದಾರರನ್ನು ಮರು ಸೇರ್ಪಡೆ ಮಾಡಬೇಕು. ಸೂಕ್ಷ್ಮ ಮತಗಟ್ಟೆಗಳಲ್ಲಿ ಪ್ಯಾರಾ ಮಿಲಿಟರಿ ಪಡೆ ನಿಯೋಜಿಸಬೇಕು. ಮೂರು ವರ್ಷ ಒಂದೇ ಕಡೆ ಕೆಲಸ ಮಾಡಿದ ಅಧಿಕಾರಿಗಳನ್ನು ಬದಲಾವಣೆ ಮಾಡಬೇಕು. ಬಿಜೆಪಿ ಏಜೆಂಟ್ ರೀತಿ ಡಿಜಿಪಿ ಕೆಲಸ ಮಾಡುತ್ತಿದ್ದಾರೆ. ಅವರನ್ನು ವರ್ಗಾವಣೆ ಮಾಡಬೇಕು. ಸಾಮಾಜಿಕ ಜಾಲತಾಣದಲ್ಲಿ ಪ್ರಚಾರದ ಖರ್ಚಿನ ಬಗ್ಗೆ ಮಾಹಿತಿ ಪಡೆಯಬೇಕು. ಬೇಕಾಬಿಟ್ಟಿಜಾಹೀರಾತಿಗೆ ಕಡಿವಾಣ ಹಾಕಬೇಕು. ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿಯಲ್ಲಿ ಬಿಜೆಪಿ ಏಜೆಂಟರು ಇದ್ದಾರೆ. ಆರ್‌ಎಸ್‌ಎಸ್ ಶಾಖೆಗೆ ಹೋಗುವವರಿದ್ದಾರೆ. ಅವರನ್ನು ಹೊರಗೆ ಹಾಕಬೇಕೆಂದು ಕೋರಿದ್ದೇವೆ ಎಂದು ಹೇಳಿದರು.

ಜತೆಗೆ ಚಿಲುಮೆ ಸಂಸ್ಥೆ ನಡೆಸಿರುವ ಅಕ್ರಮದ ಕುರಿತು ಚುನಾವಣಾ ಆಯೋಗಕ್ಕೆ ಮಾಹಿತಿ ನೀಡಲಾಗಿದೆ. ಚಿಲುಮೆ ಅಕ್ರಮದ ತನಿಖಾ ವರದಿಯನ್ನು ಬಹಿರಂಗಪಡಿಸಬೇಕು ಎಂದು ಕೋರಿದ್ದೇವೆ. ಮತ ಸೆಳೆಯುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಸತತವಾಗಿ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ ಎಂಬುದನ್ನು ಗಮನಕ್ಕೆ ತಂದಿದ್ದೇವೆ. ಸರ್ಕಾರ ತರಾತುರಿಯಲ್ಲಿ ಟೆಂಡರ್‌ಗಳನ್ನು ಕರೆಯುತ್ತಿದೆ. ಈ ಹಿನ್ನೆಲೆಯಲ್ಲಿ ತಕ್ಷಣ ನೀತಿ ಸಂಹಿತೆ ಜಾರಿಗೊಳಿಸಬೇಕು. ಮೂರು ವರ್ಷ ಒಂದೇ ಕಡೆ ಕೆಲಸ ಮಾಡಿದ ಅಧಿಕಾರಿಗಳನ್ನು ಬದಲಾವಣೆ ಮಾಡಬೇಕು. ಅಲ್ಲದೇ ಸಾಮಾಜಿಕ ಜಾಲತಾಣದಲ್ಲಿ ಪ್ರಚಾರದ ಖರ್ಚಿನ ಬಗ್ಗೆ ಮಾಹಿತಿ ಪಡೆಯಬೇಕು. ಬೇಕಾಬಿಟ್ಟಿ ಜಾಹೀರಾತಿಗೆ ಕಡಿವಾಣ ಹಾಕಬೇಕು ಎಂದು ಹೇಳಿದರು.
