

– ಪ್ರತಿಭಟನಾಕಾರರ ಮೇಲೆ ಪೊಲೀಸರಿಂದ ಲಘು ಲಾಠಿ ಪ್ರಹಾರ
ಶಿವಮೊಗ್ಗ: ರಾಜ್ಯ ಸರ್ಕಾರ (Government Of Karnataka) ಕಳೆದ ಎರಡು ದಿನಗಳ ಹಿಂದೆ ಮೀಸಲಾತಿ (Reservation) ಪ್ರಕಟ ಮಾಡಿದ್ದು, ಸದಾಶಿವ ಆಯೋಗದ ವರದಿ ಜಾರಿಗೊಳಿಸಲು ರಾಜ್ಯ ಸರ್ಕಾರ ಶಿಫಾರಸು ಮಾಡಿದೆ. ರಾಜ್ಯ ಸರ್ಕಾರದ ಈ ಕ್ರಮವನ್ನು ವಿರೋಧಿಸಿ ಶಿವಮೊಗ್ಗ (Shivamogga) ಜಿಲ್ಲೆಯ ಶಿಕಾರಿಪುರದಲ್ಲಿ ಬಂಜಾರ ಸಮುದಾಯದವರು ಪ್ರತಿಭಟನೆ ನಡೆಸಿದ್ದಾರೆ.
ಸದಾಶಿವ ಆಯೋಗದ ವರದಿಯಿಂದ ಬಂಜಾರ ಸಮುದಾಯಕ್ಕೆ ಅನ್ಯಾಯವಾಗಲಿದೆ. ಹೀಗಾಗಿ ಈ ವರದಿ ಜಾರಿಗೊಳಿಸದಂತೆ ಆಗ್ರಹಿಸಿದ್ದಾರೆ. ಅಲ್ಲದೇ ನಗರದ ಮಾಳರಕೇರಿ ಬಡಾವಣೆಯಲ್ಲಿನ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ (BS Yediyurappa) ನಿವಾಸದ ಮೇಲೆ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದಾರೆ.

ಅಲ್ಲದೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai), ಸಂಸದ ಬಿ.ವೈ ರಾಘವೇಂದ್ರ ಭಾವಚಿತ್ರಕ್ಕೆ ಬೆಂಕಿ ಹಾಕಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಭಾವಚಿತ್ರಕ್ಕೆ ಚಪ್ಪಲಿಯಿಂದ ಹಲ್ಲೆ ಮಾಡಿ ಆಕ್ರೋಶ ಹೊರಹಾಕಿದ್ದಾರೆ.

ಬಂಜಾರ, ಲಂಬಾಣಿ, ಬೋವಿ, ಕೊರಮ ಕೊರಚ ಸಮುದಾಯದವರ ಪ್ರತಿಭಟನೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಆದರೂ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ ಪರಿಣಾಮ ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಪ್ರತಿಭಟನೆಯ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಶಿಕಾರಿಪುರದಲ್ಲಿ 144 ಸೆಕ್ಷನ್ ಅಡಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.


