

ಎಲ್ಲ ಪಕ್ಷಗಳಲ್ಲಿ ಬಿರುಸಿನ ಚಟುವಟಿಕೆಗಳು ನಡೆದಿವೆ. ಎಲ್ಲ ಪಕ್ಷಗಳಲ್ಲಿ ಟಿಕೆಟ್ ಯಾರಿಗೆ ದೊರೆಯುತ್ತದೆ ಎಂಬ ಕುತೂಹಲ ಮೂಡಿದೆ.
ವಿಜಯಪುರ(ಏ.06): ರಾಜ್ಯ ವಿಧಾನಸಭೆಗೆ ಚುನಾವಣೆ ನಿಗದಿಪಡಿಸಿ ಚುನಾವಣೆ ಆಯೋಗ ವೇಳಾಪಟ್ಟಿ ಪ್ರಕಟಿಸುತ್ತಿದ್ದಂತೆ ಜಿಲ್ಲೆಯಲ್ಲೂ ರಾಜಕೀಯ ಚಟುವಟಿಕೆಗಳು ತೀವ್ರಗೊಂಡಿವೆ. ಎಲ್ಲ ರಾಷ್ಟ್ರೀಯ ಪಕ್ಷಗಳಲ್ಲಿ ಟಿಕೆಟ್ ಲಾಬಿ ತಾರಕಕ್ಕೇರಿದೆ. ಟಿಕೆಟ್‌ಗಾಗಿ ಬಿಜೆಪಿ, ಕಾಂಗ್ರೆಸ್ ಪಕ್ಷಗಳಲ್ಲಿ ಹೈವೋಲ್ಟೇಜ್ ಸಂಚಲನವಾಗುತ್ತಿದೆ.
ಏ.13ರಂದು ಜಿಲ್ಲಾ ಚುನಾವಣಾ ಅಧಿಕಾರಿಗಳು ಆಯಾ ಜಿಲ್ಲಾ ಕೇಂದ್ರಗಳಲ್ಲಿ ಅಧಿಕೃತವಾಗಿ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಅಷ್ಟರಲ್ಲಿಯೇ ವಿವಿಧ ರಾಜಕೀಯ ಪಕ್ಷಗಳು ಆಯಾ ಕ್ಷೇತ್ರಗಳಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಬೇಕಿದೆ. ಹೀಗಾಗಿ, ಟಿಕೆಟ್ ಆಕಾಂಕ್ಷಿಗಳು ಕೂಡ ತಮಗೇ ಟಿಕೆಟ್ ನೀಡಬೇಕು ಎಂದು ರಾಜಕೀಯ ಪಕ್ಷಗಳ ಮೇಲೆ ತೀವ್ರ ಒತ್ತಡ ಹೇರುತ್ತಿರುವುದು ಈಗ ಬಲು ಜೋರಾಗಿದೆ. ಟಿಕೆಟ್ ಘೋಷಣೆ ನಂತರ ಭಿನ್ನಮತ ಸ್ಫೋಟಗೊಂಡು ದಿಕ್ಕು ತಪ್ಪಿಸುವ ವಾತಾವರಣ ನಿರ್ಮಾಣವಾಗದಂತೆ ಎಚ್ಚರಿಕೆ ಹೆಜ್ಜೆಗಳನ್ನು ಇಡಬೇಕಾದ ಅನಿವಾರ್ಯತೆ ಎಲ್ಲ ರಾಜಕೀಯ ಪಕ್ಷಗಳ ಮುಖಂಡರಿಗಿದೆ.

ಜೆಡಿಎಸ್ ಟಿಕೆಟ್ ಘೋಷಣೆ ಮಾಡುವಲ್ಲಿ ಒಂದು ಹೆಜ್ಜೆ ಮುಂದೆ ಹೋಗಿದೆ. ಜಿಲ್ಲೆಯ 8 ವಿಧಾನಸಭೆ ಕ್ಷೇತ್ರಗಳ ಪೈಕಿ ಈಗಾಗಲೇ 7 ವಿಧಾನಸಭೆ ಕ್ಷೇತ್ರಗಳ ಟಿಕೆಟ್ ಫೈನಲ್ ಮಾಡಿದೆ. ವಿಜಯಪುರ ನಗರ ಮತ ಕ್ಷೇತ್ರವೊಂದೇ ಬಾಕಿ ಉಳಿದಿದೆ. ವಿಜಯಪುರ ನಗರ ವಿಧಾನಸಭೆ ಟಿಕೆಟ್ ಆಕಾಂಕ್ಷಿಗಳನ್ನು ಜಿಲ್ಲೆಯಲ್ಲಿ ಹುಡುಕದೇ, ಬೇರೆ ಸ್ಥಳದಿಂದ ಅಭ್ಯರ್ಥಿಯನ್ನು ತರುವ ನಿಟ್ಟಿನಲ್ಲಿ ಯತ್ನಿಸಲಾಗುತ್ತಿದೆ. ಆಮ್ ಆದ್ಮಿ ಪಕ್ಷ ಕೂಡ ವಿಜಯಪುರ ನಗರ, ಇಂಡಿ ಹಾಗೂ ನಾಗಠಾಣ ಮತಕ್ಷೇತ್ರದಲ್ಲಿ ಟಿಕೆಟ್ ಘೋಷಣೆ ಮಾಡಿದೆ.

ಎಲ್ಲ ರಾಜಕೀಯ ಪಕ್ಷಗಳ ಟಿಕೆಟ್ ಆಕಾಂಕ್ಷಿಗಳು ಟಿಕೆಟ್ ಗಿಟ್ಟಿಸಿಕೊಳ್ಳಲು ರಾತ್ರಿ, ಹಗಲು ಎನ್ನದೇ ವಿವಿಧ ಕಸರತ್ತು ನಡೆಸುತ್ತಿದ್ದಾರೆ. ಇನ್ನು ಕೆಲವರು ಶೇ 99ರಷ್ಟು ಟಿಕೆಟ್ ನನಗೇ ದೊರೆಯುತ್ತದೆ ಎಂದು ತಮ್ಮ ಬೆನ್ನು ತಾವೇ ಚಪ್ಪರಿಸಿಕೊಳ್ಳುತ್ತಿದ್ದಾರೆ. ಹೀಗಾಗಿ, ಎಲ್ಲ ಪಕ್ಷಗಳಲ್ಲಿ ಬಿರುಸಿನ ಚಟುವಟಿಕೆಗಳು ನಡೆದಿವೆ. ಎಲ್ಲ ಪಕ್ಷಗಳಲ್ಲಿ ಟಿಕೆಟ್ ಯಾರಿಗೆ ದೊರೆಯುತ್ತದೆ ಎಂಬ ಕುತೂಹಲ ಮೂಡಿದೆ.
