
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರಿಗೆ ಪದ್ಮಶ್ರೀ ಪುರಸ್ಕೃತ ಅಕ್ಷರ ಸಂತ ಹರೇಕಳ ಹಾಜಬ್ಬ (Padma Shri recipient Harekala Hajabba) ಅವರು ಮನವಿಯೊಂದನ್ನು ಸಲ್ಲಿಸಿದ್ದಾರೆ.ಇಂದು (ಶನಿವಾರ) ಸಿಎಂ ಅವರನ್ನು ಭೇಟಿಯಾದ ಹಾಜಬ್ಬ, ಮಂಗಳೂರು ತಾಲೂಕಿನ ಹರೇಕಳ ನ್ಯೂಪಡ್ಪುವಿನ ಸರ್ಕಾರಿ ಪ್ರೌಢಶಾಲೆಯನ್ನು ಪದವಿ ಪೂರ್ವ ಕಾಲೇಜಿಗೆ ಮೇಲ್ದರ್ಜೆಗೇರಿಸಲು ಮನವಿ ಸಲ್ಲಿಸಿದರು.

ಮಂಗಳೂರು ವಿಶ್ವವಿದ್ಯಾನಿಲಯ ಇರುವ ಕೊಣಾಜೆ ಸಮೀಪದ ಹರೇಕಳದಲ್ಲಿ ಗ್ರಾಮೀಣ ಮಕ್ಕಳಲ್ಲಿ ಶಾಲೆಯ ಸೌಲಭ್ಯ ಇರಲಿಲ್ಲ. ಮಂಗಳೂರಿನ ಕೇಂದ್ರ ಪ್ರದೇಶ ಸ್ಟೇಟ್ ಬ್ಯಾಂಕ್ ಸರ್ಕಲಿನಲ್ಲಿ ಕಿತ್ತಳೆ ಹಣ್ಣು ಮಾರಾಟ ಮಾಡುವ ಕಾಯಕ ಮಾಡುತ್ತಿದ್ದ ಹಾಜಬ್ಬ ತಾವೇ ಶಾಲೆಯೊಂದನ್ನು ತನ್ನೂರಿನಲ್ಲಿ ನಿರ್ಮಿಸಿದ್ದರು.

ಕಿತ್ತಳೆ ಮಾರಾಟ (Orange Vendor) ಮಾಡುತ್ತಿದ್ದಾಗ ವಿದೇಶಿ ಮಹಿಳೆಯ ಆಂಗ್ಲ ಭಾಷೆಯ ಪ್ರಶ್ನೆಗೆ ಉತ್ತರ ನೀಡಲಾಗದ ಹಾಜಬ್ಬರಿಗೆ ಶಿಕ್ಷಣದ ಮಹತ್ವ ಅರಿವಾಗಿತ್ತು. ಈ ಹಿನ್ನೆಲೆಯಲ್ಲಿಯೇ ತನ್ನೂರಿನ ಮಕ್ಕಳಿಗೆ ಶಾಲೆ ತೆರೆಯಲು ಕಚೇರಿಯಿಂದ ಕಚೇರಿಗೆ ಅಲೆದು ಶಾಲೆ ನಿರ್ಮಾಣ ಮಾಡಿದ್ದರು. ಇವರ ಸಾಧನೆಯ ವಿಚಾರ ಮಾಧ್ಯಮಗಳಲ್ಲಿ ಪ್ರಕಟವಾಗಿದ್ದರೂ ಹೆಚ್ಚಿನ ಪ್ರಚಾರ ಪಡೆದುಕೊಂಡಿರಲಿಲ್ಲ. ಬಳಿಕ ಅವರು ತನ್ನೂರಿನಲ್ಲಿ ಕಾಲೇಜು ಆರಂಭಿಸುವ ಆಶಯ ಹೊಂದಿದ್ದು, ಇಂದು ಸಿಎಂಗೆ ಈ ಬಗ್ಗೆ ಮನವಿ ಸಲ್ಲಿಸಿದ್ದಾರೆ.
