
ಧರ್ಮಸ್ಥಳದಲ್ಲಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಸೌಜನ್ಯ ಪ್ರಕರಣವನ್ನು ಮರುತನಿಖೆಗೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲು ರಾಜ್ಯ ಸರ್ಕಾರ ಸಿದ್ಧವಿದ್ದು, ಅದಕ್ಕೂ ಮುನ್ನ ಸೌಜನ್ಯ ಪೋಷಕರು ಮರುತನಿಖೆಗೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಬೆಂಗಳೂರು (ಆ.24): ಧರ್ಮಸ್ಥಳದಲ್ಲಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಸೌಜನ್ಯ ಪ್ರಕರಣವನ್ನು ಮರುತನಿಖೆಗೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲು ರಾಜ್ಯ ಸರ್ಕಾರ ಸಿದ್ಧವಿದ್ದು, ಅದಕ್ಕೂ ಮುನ್ನ ಸೌಜನ್ಯ ಪೋಷಕರು ಮರುತನಿಖೆಗೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣಾದಲ್ಲಿ ಬುಧವಾರ ಸಾಹಿತಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ಅವರು ಸಭೆ ನಡೆಸಿದರು. ಈ ವೇಳೆ ಸಾಹಿತಿಗಳು ಸೌಜನ್ಯ ಪ್ರಕರಣ ಮರು ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆಯಾಗುವಂತೆ ಮಾಡಬೇಕು ಎಂದು ಒತ್ತಾಯಿಸಿದರು.

ಅದಕ್ಕೆ ಉತ್ತರಿಸಿದ ಸಿದ್ದರಾಮಯ್ಯ ಅವರು, ಸೌಜನ್ಯ ಕೊಲೆ ಪ್ರಕರಣ ಮರುತನಿಖೆ ನಡೆಸುವಂತೆ ಆಕೆಯ ಪೋಷಕರು ಕೇಂದ್ರ ಸರ್ಕಾರವನ್ನು ಕೋರಬೇಕಿದೆ. ಅದರ ಬೆನ್ನಲ್ಲೇ ರಾಜ್ಯ ಸರ್ಕಾರವೂ ಮರುತನಿಖೆ ನಡೆಸಲು ಪತ್ರ ಬರೆಯಲಿದೆ. ಅಲ್ಲದೆ, ಪ್ರಕರಣ ಕುರಿತಂತೆ ಹಾಗೂ ಮರುತನಿಖೆ ನಡೆಸಲು ಕೇಂದ್ರದ ಮೇಲೆ ಒತ್ತಡ ತರುವ ಬಗ್ಗೆ ಅಡ್ವೋಕೇಟ್ ಜನರಲ್ ಅವರೊಂದಿಗೆ ಚರ್ಚಿಸುತ್ತೇನೆ ಎಂದು ಹೇಳಿದರು.

ಸೌಜನ್ಯ ಹತ್ಯೆ ಆರೋಪಿಗಳ ವಿಧಾನಸೌಧಕ್ಕೆ ಜಾಗೃತಿ ಯಾತ್ರೆ: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಪುನರ್ ತನಿಖೆ ನಡೆಸಿ ನೈಜ ಆರೋಪಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿ ಧರ್ಮಸ್ಥಳದ ಸೌಜನ್ಯ ಮನೆಯಿಂದ ವಿಧಾನಸೌಧದವರೆಗೂ ಜನಜಾಗೃತಿ ಯಾತ್ರೆ ನಡೆಸಲಾಗುವುದು ಎಂದು ತ್ರಿಶೂಲ ಸೇನೆ ಸಂಘಟನೆಯ ಅಧ್ಯಕ್ಷ ಗಂಗಾಧರ ರಾಜು ತಿಳಿಸಿದರು.

ಸೌಜನ್ಯ ಪ್ರಕರಣ ತನಿಖೆಗೆ ವಿಶೇಷ ತನಿಖಾದಳ ರಚಿಸಲು ಆಗ್ರಹ: ಧರ್ಮಸ್ಥಳದಲ್ಲಿ ಉಜಿರೆ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ, ಹತ್ಯೆ ಪ್ರಕರಣದ ಆರೋಪಿಗಳ ಪತ್ತೆಗಾಗಿ ವಿಶೇಷ ತನಿಖಾ ದಳ ರಚಿಸುವಂತೆ ಒತ್ತಾಯಿಸಿ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಮಂಡ್ಯದಲ್ಲಿ ಬುಧವಾರ ಪ್ರತಿಭಟನೆ ನಡೆಸಿತು. ನಗರದ ಸರ್ ಎಂ.ವಿಶ್ವೇಶ್ವರಯ್ಯ ಪ್ರತಿಮೆ ಬಳಿಯಿಂದ ಮೆರವಣಿಗೆ ಹೊರಟ ಸಂಘಟನೆ ಕಾರ್ಯಕರ್ತೆಯರು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.