
ಬೆಂಗಳೂರು: ಬಿಬಿಎಂಪಿ (BBMP) ಮುಖ್ಯ ಕಚೇರಿಯ ಆವರಣದ ಕಟ್ಟಡವೊಂದರಲ್ಲಿ ಬೆಂಕಿ ಕಾಣಿಸಿಕೊಂಡ ಪ್ರಕರಣದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮುಖ್ಯ ಎಂಜಿನಿಯರ್ ಶಿವಕುಮಾರ್ (Shivakumar) ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ.

ಶಿವಕುಮಾರ್ ಅವರು ಗುಣ ನಿಯಂತ್ರಣ ವಿಭಾಗದದಲ್ಲಿ ಮುಖ್ಯ ಎಂಜಿನಿಯರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಬೆಂಕಿ ಅವಘಡದ ವೇಳೆ ಎಲ್ಲರನ್ನೂ ರಕ್ಷಿಸುವಾಗ ವಿಷಾನಿಲ ದೇಹದ ಶ್ವಾಸಕೋಶಕ್ಕೆ ಹೊಕ್ಕಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.

ಕೆಲ ದಿನಗಳ ಹಿಂದೆ ಬಿಬಿಎಂಪಿಯ ಗುಣನಿಯಂತ್ರಣ ವಿಭಾಗದ ಪ್ರಯೋಗಾಲಯ ಮತ್ತು ಕಚೇರಿ ಕಟ್ಟಡದಲ್ಲಿ ಬೆಂಕಿ ಹೊತ್ತಿಕೊಂಡಿತ್ತು. ಹೊತ್ತಿ ಉರಿದ ಬೆಂಕಿಯಿಂದಾಗಿ 9 ಮಂದಿ ಬಿಬಿಎಂಪಿ ನೌಕರರಿಗೆ ತೀವ್ರ ಗಾಯಗಳಾಗಿದ್ದವು. ಎಲ್ಲರನ್ನೂ ವಿಕ್ಟೋರಿಯಾ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಬೆಂಕಿ ಅವಘಡದಿಂದಾಗಿ ಗಂಭೀರ ಗಾಯಗೊಂಡಿದ್ದ ಬಿಬಿಎಂಪಿ ಮುಖ್ಯ ಎಂಜಿನಿಯರ್ ಶಿವಕುಮಾರ್ ಅವರು ಇಂದು ನಿಧನರಾಗಿದ್ದಾರೆ.

ಬಿಬಿಎಂಪಿ ಗುಣಮಟ್ಟದ ಪರೀಕ್ಷಾ ಪ್ರಯೋಗಾಲಯ ಅಗ್ನಿ ದುರಂತಕ್ಕೆ ಸಿಲುಕಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಿಬಿಎಂಪಿ ಮುಖ್ಯ ಎಂಜಿನಿಯರ್ ಶಿವಕುಮಾರ್ ಅವರ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ.

ಮುಖ್ಯ ಎಂಜಿನಿಯರ್ ಶಿವಕುಮಾರ್ ಅವರ ಅಗಲಿಕೆ ಸುದ್ದಿ ಕೇಳಿ ಬೇಸರವಾಗಿದೆ. ಕೆಲ ದಿನಗಳ ಹಿಂದಷ್ಟೇ ನಾನು ಆಸ್ಪತ್ರೆಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದ್ದೆ. ವೈದ್ಯರು ಉತ್ತಮ ಚಿಕಿತ್ಸೆ ನೀಡಿದರೂ ಅವರ ಸ್ಥಿತಿ ಚಿಂತಾಜನಕವಾಗಿತ್ತು. ಅವರು ಗುಣಮುಖರಾಗಲಿ ಎಂದು ಪ್ರಾರ್ಥನೆ ಸಲ್ಲಿಸಿದ್ದೆವು. ನಮ್ಮ ಪ್ರಾರ್ಥನೆ ಫಲ ನೀಡಲಿಲ್ಲ” ಎಂದು ವಿಷಾದಿಸಿದ್ದಾರೆ.

ಚಿಕ್ಕ ವಯಸ್ಸಿನಲ್ಲಿ ಈ ಅವಘಡದಿಂದ ಪ್ರಾಣ ಕಳೆದುಕೊಂಡಿರುವುದು ಮನಸ್ಸಿಗೆ ನೋವು ಉಂಟು ಮಾಡಿದೆ. ಶಿವಕುಮಾರ್ ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಅಗಲಿಕೆ ನೋವನ್ನು ಭರಿಸುವ ಶಕ್ತಿ ಅವರ ಕುಟುಂಬ ಸದಸ್ಯರು ಹಾಗೂ ಬಂಧು ಮಿತ್ರರಿಗೆ ಕರುಣಿಸಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ” ಎಂದು ಡಿ.ಕೆ. ಶಿವಕುಮಾರ್ ಅವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.