
Siddaramaiah Instruct Withdraw Hijab Ban Order : ಸಿಎಂ ಸಿದ್ದರಾಮಯ್ಯ ಅವರು ಹಿಜಾಬ್ ನಿಷೇಧ ಆದೇಶವನ್ನು ರದ್ದು ಮಾಡಲು ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ. ಮೈಸೂರಿನ ನಂಜನಗೂಡಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಆಹಾರ, ಉಡುಪಿನ ಸಂಸ್ಕೃತಿ ಬಗ್ಗೆ ಬಿಜೆಪಿ ವಿಚಾರಗಳನ್ನು ಕಿಡಿಕಾರಿದರು. ಬಳಿಕ ರಾಜ್ಯದಲ್ಲಿ ನೋ ಹಿಜಾಬ್ ಬ್ಯಾನ್, ಇನ್ನು ಶೈಕ್ಷಣಿಕ ಸಂಸ್ಥೆಗಳಲ್ಲಿ ಹಿಜಾಬ್ ಧರಿಸಿ ಹೋಗಿ ಎಂದು ಸಿಎಂ ಹೇಳಿದ್ದಾರೆ.

ಮೈಸೂರು: ಊಟ ಹಾಗೂ ಬಟ್ಟೆ ಅವರವರ ಇಷ್ಟ. ಯಾರೂ ಅದನ್ನು ವಿರೋಧಿಸಬಾರದು. ಸದ್ಯ ರಾಜ್ಯದಲ್ಲಿ ಜಾರಿಯಲ್ಲಿರುವ ಹಿಬಾಬ್ ನಿಷೇಧ ಆದೇಶವನ್ನು ಹಿಂಪಡೆಯಲು ಸೂಚನೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಮೂಲಕ ಹಿಂದಿನ ಬಿಜೆಪಿ ಸರ್ಕಾರವು ಶೈಕ್ಷಣಿಕ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧ ಮಾಡಿ ಹೊರಡಿಸಿದ್ದ ಆದೇಶವನ್ನು ಸದ್ಯ ಕಾಂಗ್ರೆಸ್ ಸರ್ಕಾರ ತೆರವು ಮಾಡುತ್ತಿದೆ. ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ಹಿಜಾಬ್ ಧರಿಸಿ ತೆರಳಲು ಅವಕಾಶ ನೀಡಲಾಗುತ್ತದೆ.
ಮೈಸೂರು ಜಿಲ್ಲೆಯ ನಂಜನಗೂಡು ಕ್ಷೇತ್ರದಲ್ಲಿ ನೂತನವಾಗಿ ನಿರ್ಮಿಸಿರುವ ಕವಲಂದೆ, ಅಂತರಸಂತೆ, ಜಯಪುರ ಪೊಲೀಸ್ ಠಾಣೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪ್ರಧಾನಿ ಮೋದಿ ಅವರ ಸಬ್ ಕಾ ಸಾಥ್-ಸಬ್ ಕಾ ವಿಕಾಸ್ ಎನ್ನುವುದು ಬೋಗಸ್. ಬಟ್ಟೆ, ಉಡುಪು, ಜಾತಿ, ಆಧಾರದ ಮೇಲೆ ಜನರನ್ನು ವಿಭಜಿಸುವ, ಸಮಾಜವನ್ನು ವಿಭಜಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಹಿಜಾಬ್ ನಿಷೇಧವನ್ನು ವಾಪಾಸ್ ಪಡೆಯಲು ಹೇಳಿದೀನಿ. ಹಿಜಾಬ್ ಹಾಕಿಕೊಂಡು ಹೋಗಬಹುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಬಿಜೆಪಿಯವರು ಟೋಪಿ ಹಾಕಿಕೊಂಡವರು, ಗಡ್ಡ ಬಿಟ್ಟವರು ಎಂದೆಲ್ಲಾ ಬೇಧ ಮಾಡುತ್ತಾರೆ. ಆದರೆ, ನಾವು ಯಾವುದೇ ಜಾತಿ, ಧರ್ಮಕ್ಕೆ ಕಟ್ಟುಬಿದ್ದಿಲ್ಲ. ನಮ್ಮ ಯೋಜನೆಗಳು ಜಾತಿ ಧರ್ಮಕ್ಕೆ ಸೀಮಿತವಾಗಿಲ್ಲ. ಎಲ್ಲಾ ಬಡಜನರಿಗೂ ನಮ್ಮ ಯೋಜನೆಗಳು ತಲುಪಬೇಕು ರೂಪಿಸಿದ್ದೇವೆ ಎಂದರು.
ಬಿಜೆಪಿಯವರು ಗ್ಯಾರಂಟಿ ಯೋಜನೆಗಳ ಲಾಭ ಪಡೀತಿಲ್ವಾ?
ನಾವು ಎಲ್ಲ ಜಾತಿ, ಎಲ್ಲಾ ಧರ್ಮದವರಿಗೆ ಮಾತ್ರವಲ್ಲ ಎಲ್ಲಾ ಪಕ್ಷದವರಿಗೂ ಅನುಕೂಲ ಆಗುವ ಕಾರ್ಯಕ್ರಮಗಳನ್ನು ರೂಪಿಸಿದ್ದೇವೆ. ಬಿಜೆಪಿಯವರು 10 ಕೆಜಿ ಅಕ್ಕಿ ಪಡೆಯುತ್ತಿಲ್ಲವಾ ? ಬಿಜೆಪಿಯವರು ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸುತ್ತಿಲ್ಲವೇ ? ಬಿಜೆಪಿಯವರು ಗೃಹಜ್ಯೋತಿ, ಗೃಹಲಕ್ಷ್ಮಿ ಯ ಹಣ ಪಡೆಯುತ್ತಿಲ್ಲವೇ ? ನಮ್ಮ ಗ್ಯಾರಂಟಿ ಸ್ಕೀಂ ಗಳ ಲಾಭ ಪಡೆಯುತ್ತಿಲ್ಲವೇ ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು ಸುಳ್ಳು ಹೇಳುವವರ, ನಮ್ಮ ಸರ್ಕಾರದ ಲಾಭ ಪಡೆದೂ ನಕ್ರಾ ಆಡುವವರ ಜತೆ ಹೋಗಬೇಡಿ ಎಂದರು.