
Wayanad Lok Sabha Elections: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿ ವಯನಾಡು ಮತ್ತು ರಾಯ್‌ಬರೇಲಿ ಎರಡೂ ಕ್ಷೇತ್ರಗಳಲ್ಲಿ ಗೆಲುವು ಕಂಡಿದ್ದರು. ಈ ಹಿನ್ನೆಲೆಯಲ್ಲಿ ಯಾವುದಾದರೂ ಒಂದು ಕ್ಷೇತ್ರವನ್ನು ಬಿಟ್ಟುಕೊಡಲೇಬೇಕಾಗಿತ್ತು. ಇದೀಗ ಗಾಂಧಿ ಕುಟುಂಬದ ಭದ್ರಕೋಟೆಯಾದ ರಾಯ್ಬರೇಲಿಯನ್ನು ರಾಹುಲ್ ಗಾಂಧಿ ಆಯ್ಕೆ ಮಾಡಿಕೊಂಡಿದ್ದಾರೆ ಎಂದು ಕಾಂಗ್ರೆಸ್ ಖಚಿತಪಡಿಸಿದೆ.

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಮುಂದೆ ರಾಯ್‌ಬರೇಲಿ (Raebareli) ಮತ್ತು ವಯನಾಡು (Wayanad) ಈ 2 ಆಯ್ಕೆಗಳಿತ್ತು. ಇವೆರಡರಲ್ಲಿ ರಾಯ್ ಬರೇಲಿ ಲೋಕಸಭಾ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಅವರಿಂದ ತೆರವಾಗುವ ವಯನಾಡು ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುವ ಮೂಲಕ ಚುನಾವಣೆಗೆ ಪದಾರ್ಪಣೆ ಮಾಡಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಖಚಿತಪಡಿಸಿದ್ದಾರೆ.

ರಾಹುಲ್ ಗಾಂಧಿ ಅವರು ರಾಯ್ ಬರೇಲಿ ಮತ್ತು ವಯನಾಡ್ ಲೋಕಸಭಾ ಕ್ಷೇತ್ರಗಳಿಂದ ಸ್ಪರ್ಧಿಸಿ ಎರಡೂ ಕಡೆ ಗೆದ್ದಿದ್ದರು. ಲೋಕಸಭಾ ಚುನಾವಣಾ ಫಲಿತಾಂಶದ 14 ದಿನಗಳಲ್ಲಿ ಒಂದು ಸ್ಥಾನವನ್ನು ಖಾಲಿ ಮಾಡಬೇಕಾಗಿದೆ. ಹೀಗಾಗಿ, ಇಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಕಾಂಗ್ರೆಸ್ ನಾಯಕರು ಸಭೆ ನಡೆಸಿದ್ದರು. ರಾಯ್‌ಬರೇಲಿ ಕ್ಷೇತ್ರವನ್ನು ರಾಹುಲ್ ಗಾಂಧಿ ಕುಟುಂಬಕ್ಕೆ ಹತ್ತಿರವಾಗಿರುವುದರಿಂದ ಅದನ್ನು ಉಳಿಸಿಕೊಳ್ಳಬೇಕೆಂದು ಪಕ್ಷ ನಿರ್ಧರಿಸಿದೆ ಎಂದು ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.

ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪಕ್ಷದ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ ವೇಣುಗೋಪಾಲ್ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಈ ಸಭೆಯಲ್ಲಿ ಉಪಸ್ಥಿತರಿದ್ದರು. “ರಾಹುಲ್ ಗಾಂಧಿಯಿಂದ ತೆರವಾಗುವ ವಯನಾಡು ಕ್ಷೇತ್ರದಲ್ಲಿ ಪ್ರಿಯಾಂಕಾ ಗಾಂಧಿ ಅವರು ಸ್ಪರ್ಧಿಸಬೇಕೆಂದು ನಾವು ನಿರ್ಧರಿಸಿದ್ದೇವೆ” ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಈ ನಿರ್ಧಾರವನ್ನು ಒಪ್ಪಿಕೊಂಡ ಸಹೋದರ-ಸಹೋದರಿಗೆ (ರಾಹುಲ್- ಪ್ರಿಯಾಂಕಾ) ಅವರು ಧನ್ಯವಾದ ತಿಳಿಸಿದ್ದಾರೆ.

ಪ್ರಿಯಾಂಕಾ ಗಾಂಧಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ವಾರಾಣಸಿಯಲ್ಲಿ ನರೇಂದ್ರ ಮೋದಿ ಅವರ ಎದುರಾಳಿಯಾಗಿ ಸ್ಪರ್ಧಿಸಲಿದ್ದಾರೆ ಎನ್ನಲಾಗಿತ್ತು. ಬಳಿಕ ಅಮೇಥಿಯಿಂದ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿಗಳೂ ಹರಿದಾಡಿದ್ದವು. ಆದರೆ, ಪಕ್ಷದ ಪರವಾಗಿ ಚುನಾವಣಾ ಪ್ರಚಾರ ಮಾಡಲು ಸಮಯ ಮೀಸಲಿಡುತ್ತೇನೆ ಎಂದಿದ್ದ ಪ್ರಿಯಾಂಕಾ ಗಾಂಧಿ ಯಾವ ಕ್ಷೇತ್ರದಲ್ಲೂ ಚುನಾವಣೆಗೆ ಸ್ಪರ್ಧಿಸಿರಲಿಲ್ಲ. ಇದೀಗ ವಯನಾಡು ಲೋಕಸಭಾ ಕ್ಷೇತ್ರದಿಂದ ಚುನಾವಣಾ ಕಣಕ್ಕೆ ಅವರು ಪದಾರ್ಪಣೆ ಮಾಡಲಿದ್ದಾರೆ