ನವದೆಹಲಿ: ಲೋಕಸಭೆ ವಿರೋಧ ಪಕ್ಷದ ನಾಯಕನಾಗಿ ಕಾಂಗ್ರೆಸ್ ನಾಯಕ ಹಾಗೂ ರಾಯ್ಬರೇಲಿ ಸಂಸದ ರಾಹುಲ್ ಗಾಂಧಿ ಅವರನ್ನು ಆಯ್ಕೆ ಮಾಡಲಾಗಿದೆ. ಈ ಹಿಂದೆಯೂ ಹಲವು ಬಾರಿ ರಾಹುಲ್ ಗಾಂಧಿ ಅವರೇ ವಿಪಕ್ಷ ನಾಯಕನಾಗಲಿದ್ದಾರೆ ಎಂಬ ಸುದ್ದಿಗಳು ಹರಿದಾಡಿದ್ದವು. ಇಂಡಿಯಾ ಬ್ಲಾಕ್ ಸಭೆಯಲ್ಲಿ ಇತರೆ ಪಕ್ಷಗಳು ಕೂಡ ಇದಕ್ಕೆ ಬೆಂಬಲ ನೀಡಿದ್ದವು. ಆದರೆ, ಇಂದು ಈ ಕುರಿತು ಕಾಂಗ್ರೆಸ್ ಅಧಿಕೃತವಾಗಿ ಮಾಹಿತಿ ನೀಡಿದೆ.

ನವದೆಹಲಿ: ಲೋಕಸಭೆ ವಿರೋಧ ಪಕ್ಷದ ನಾಯಕನಾಗಿ (Lok Sabha Leader of Opposition) ಕಾಂಗ್ರೆಸ್ ನಾಯಕ ಹಾಗೂ ರಾಯ್ಬರೇಲಿ ಸಂಸದ ರಾಹುಲ್ ಗಾಂಧಿ (Rahul Gandhi) ಅವರನ್ನು ಆಯ್ಕೆ ಮಾಡಲಾಗಿದೆ. ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ದೆಹಲಿಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರ ನಿವಾಸದಿಂದ ಇಂಡಿಯಾ ಬ್ಲಾಕ್ನ ಫ್ಲೋರ್ ಲೀಡರ್ಗಳ ಸಭೆಯಲ್ಲಿ ಪಾಲ್ಗೊಂಡ ಬಳಿಕ ಇದೀಗ ನಿರ್ಗಮಿಸಿದ್ದಾರೆ. ಬುಧವಾರ ಲೋಕಸಭೆ ಸ್ಪೀಕರ್ ಚುನಾವಣೆ ನಡೆಯಲಿದೆ. ಇದರ ಬೆನ್ನಲ್ಲೇ ವಿರೋಧ ಪಕ್ಷದ ನಾಯಕನ್ನಾಗಿ ರಾಹುಲ್ ಗಾಂಧಿ ರವರನ್ನು ಆಯ್ಕೆ ಮಾಡಲಾಗಿದೆ.

ಇಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಇಂಡಿಯಾ ಬ್ಲಾಕ್ನ ಸಭೆ ನಡೆಯಿತು. ಈ ಸಭೆಯಲ್ಲಿ ರಾಹುಲ್ ಗಾಂಧಿ ಅವರನ್ನು ವಿರೋಧ ಪಕ್ಷದ ನಾಯಕರನ್ನಾಗಿ ಮಾಡುವ ಬಗ್ಗೆ ಚರ್ಚೆ ನಡೆಸಲಾಯಿತು. ಇಂಡಿಯಾ ಬ್ಲಾಕ್ ಸಭೆಯ ನಂತರ ಮಾಹಿತಿ ನೀಡಿದ ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಸಂಸದ ಕೆ.ಸಿ. ವೇಣುಗೋಪಾಲ್, ಈ ಸಭೆಯಲ್ಲಿ ರಾಹುಲ್ ಗಾಂಧಿ ಅವರನ್ನು ಸದನದ ವಿರೋಧ ಪಕ್ಷದ ನಾಯಕರನ್ನಾಗಿ ಮಾಡುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ ಎಂದಿದ್ದಾರೆ.

ಇತ್ತೀಚೆಗಷ್ಟೇ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ರಾಹುಲ್ ಗಾಂಧಿ ಅವರನ್ನು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರನ್ನಾಗಿ ಮಾಡಬೇಕೆಂದು ಒಮ್ಮತದ ಆಗ್ರಹ ಕೇಳಿಬಂದಿತ್ತು. ಈ ಸಭೆಯಲ್ಲಿ ರಾಹುಲ್ ಗಾಂಧಿ ಅವರನ್ನು ಲೋಕಸಭೆಯಲ್ಲಿ ಪಕ್ಷದ ನಾಯಕರನ್ನಾಗಿ ನೇಮಿಸಬೇಕು ಎಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯರು ನಿರ್ಣಯ ಅಂಗೀಕರಿಸಿದ್ದರು. ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಅವರ ಹೆಸರಿನ ಪ್ರಸ್ತಾವನೆ ಅಂಗೀಕಾರವಾದಾಗ, ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸದಸ್ಯರಿಗೆ ಈ ಬಗ್ಗೆ ಯೋಚಿಸಲು ಸ್ವಲ್ಪ ಸಮಯ ಕೇಳಿದ್ದರು.