ಬಹುಜನ ಸಮಾಜವಾದಿ ಪಕ್ಷ (ಬಿಎಸ್‌ಪಿ)ದ ತಮಿಳುನಾಡು ರಾಜ್ಯಾಧ್ಯಕ್ಷ ಆರ್ಮ್‌ಸ್ಟ್ರಾಂಗ್ ಅವರನ್ನು ಚೆನ್ನೈ ಬಳಿಯ ಅವರ ಪೆರಂಬೂರ್ ನಿವಾಸದಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಕೊಲೆಯನ್ನು ಮಾಡಿದ ಆರೋಪಿಗಳಿಗಾಗಿ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ.

ಚೆನ್ನೈ: ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ತಮಿಳುನಾಡು ಅಧ್ಯಕ್ಷ ಆರ್ಮ್‌ಸ್ಟ್ರಾಂಗ್ ಅವರನ್ನು ಇಂದು (ಜುಲೈ 5) ಪೆರಂಬೂರ್‌ನಲ್ಲಿರುವ ಅವರ ನಿವಾಸದ ಬಳಿ 6 ಮಂದಿ ಅಪರಿಚಿತ ವ್ಯಕ್ತಿಗಳ ಗುಂಪೊಂದು ಬರ್ಬರವಾಗಿ ಕೊಲೆ ಮಾಡಿದೆ ಎಂದು ಚೆನ್ನೈ ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಕೊಲೆಯ ಹಿಂದಿನ ಉದ್ದೇಶವು ಅಸ್ಪಷ್ಟವಾಗಿದೆ.

ಸೇಂಬಿಯಂ ಪೊಲೀಸರ ವ್ಯಾಪ್ತಿಯಲ್ಲಿ ಈ ಭೀಕರ ಘಟನೆ ಸಂಭವಿಸಿದೆ. ದುಷ್ಕರ್ಮಿಗಳನ್ನು ಬಂಧಿಸಲು ತೀವ್ರ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ. ಚೆನ್ನೈನ ಪೆರಂಬೂರ್ ಪ್ರದೇಶದಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ

ವರದಿಗಳ ಪ್ರಕಾರ, ಅಪರಿಚಿತ ಗ್ಯಾಂಗ್ ಪೆರಂಬೂರಿನ ಸದಾಯಪ್ಪನ್ ಸ್ಟ್ರೀಟ್‌ನಲ್ಲಿರುವ ಅವರ ಮನೆಯ ಸಮೀಪವೇ ಅವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿ, ಪರಾರಿಯಾಗಿದೆ. ತಕ್ಷಣ ಬಿಎಸ್‌ಪಿ ರಾಜ್ಯಾಧ್ಯಕ್ಷರನ್ನು ಚಿಕಿತ್ಸೆಗಾಗಿ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಅವರ ಜೀವ ಉಳಿಸಲು ಸಾಧ್ಯವಾಗಲಿಲ್ಲ.

ಸದ್ಯ ಪೊಲೀಸರು ಈ ಕೊಲೆಯ ತನಿಖೆ ನಡೆಸುತ್ತಿದ್ದಾರೆ. ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಪಳನಿಸ್ವಾಮಿ ಈ ಹತ್ಯೆಯನ್ನು ಖಂಡಿಸಿದ್ದಾರೆ. ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಮತ್ತು ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಅವರು ತಮ್ಮ ಅಧಿಕೃತ ಎಕ್ಸ್ ಖಾತೆಯನ್ನು ಈ ಘಟನೆಯ ಬಗ್ಗೆ ಆಘಾತ ವ್ಯಕ್ತಪಡಿಸಿದ್ದಾರೆ.
