ಬೆಂಗಳೂರು\ವಿಜಯಪುರ: ಬಸವನಬಾಗೇವಾಡಿ ಶಾಸಕ ಸ್ಥಾನಕ್ಕೆ ಸಚಿವ ಶಿವಾನಂದ ಪಾಟೀಲ್ (Shivanand Patil) ಅವರು ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಬಸನಗೌಡ ಪಾಟೀಲ್ ಯತ್ನಾಳ್ (Basanagowda Patil Yatnal) ಅವರ ಸವಾಲನ್ನು ಸ್ವೀಕರಿಸಿದ್ದಾರೆ.
ಸ್ಪೀಕರ್ ಯು.ಟಿ.ಖಾದರ್ ಅವರಿಗೆ ಸಚಿವ ಶಿವಾನಂದ ಪಾಟೀಲ್ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಪತ್ರವನ್ನು ಶುಕ್ರವಾರ ಹಸ್ತಾಂತರಿಸಿದ್ದಾರೆ.

ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ತಮ್ಮ ಕ್ಷೇತ್ರಕ್ಕೆ ರಾಜೀನಾಮೆ ಸಲ್ಲಿಸಿ, ನನ್ನ ವಿರುದ್ಧ ಬಸವನ ಬಾಗೇವಾಡಿ ಕ್ಷೇತ್ರದಿಂದ ಸ್ಪರ್ಧೆ ಮಾಡುವುದಾಗಿ ಸವಾಲು ಹಾಕಿದ್ದಾರೆ. ನಾನು ಅವರ ಸವಾಲನ್ನು ಸ್ವೀಕರಿಸಿ, ಅವರ ವಿರುದ್ಧ ಚುನಾವಣೆಗೆ ಸ್ಪರ್ಧಿಸಲು ನಿರ್ಧರಿಸಿದ್ದೇನೆ. ಹಾಗಾಗಿ, ನಾನು ಪ್ರತಿನಿಧಿಸುತ್ತಿರುವ ಬಸವನ ಬಾಗೇವಾಡಿ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ಶಿವಾನಂದ ಪಾಟೀಲ್ ತಿಳಿಸಿದ್ದಾರೆ.

ಯತ್ನಾಳ್ ಅವರು ಸವಾಲು ಹಾಕಿರುವಂತೆ ಅವರ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿ. ಅವರ ರಾಜೀನಾಮೆ ಅಂಗೀಕಾರವಾದರೆ ಮಾತ್ರ ದಯಮಾಡಿ ನನ್ನ ರಾಜೀನಾಮೆಯನ್ನು ಅಂಗೀಕರಿಸುವಂತೆ ಸ್ಪೀಕರ್ ಯು.ಟಿ.ಖಾದರ್ ಅವರಿಗೆ ಸಚಿವ ಶಿವಾನಂದ ಪಾಟೀಲ್ ಅವರು ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ