ಮಂಗಳೂರು: ಬಂಟ್ವಾಳದ ಅಬ್ದುಲ್ ರಹೀಂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಸುಮಿತ್, ರವಿರಾಜ್ ಎಂದು ಗುರುತಿಸಲಾಗಿದೆ. ಆ ಮೂಲಕ ಬಂಧಿತರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.
ಈ ಹಿಂದೆ ಪೊಲೀಸರು ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದೀಪಕ್(21), ಅಮ್ಮುಂಜೆ ಗ್ರಾಮದ ಪೃಥ್ವಿರಾಜ್(21) ಮತ್ತು ಚಿಂತನ್(19) ಎಂಬ ಆರೋಪಿಗಳನ್ನು ಬಂಧಿಸಿದ್ದರು.
ಆರೋಪಿಗಳ ವಿಚಾರಣೆ ನಡೆಸಲಾಗುತ್ತಿದೆ. ಉಳಿದ ಆರೋಪಿಗಳ ಪತ್ತೆ ಕಾರ್ಯವು ಪ್ರಗತಿಯಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಂಗಳವಾರ ಮಧ್ಯಾಹ್ನ ತಾಲೂಕಿನ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ಪಿಕಪ್ ವಾಹನದಲ್ಲಿ ಮರಳು ಸಾಗಾಟ ಮಾಡುತ್ತಿದ್ದ ವೇಳೆ ಅಬ್ದುಲ್ ರಹೀಂ ಮತ್ತು ಕಲಂದರ್ ಶಾಫಿ ಎಂಬವರ ಮೇಲೆ ದುಷ್ಕರ್ಮಿಗಳ ತಂಡವೊಂದು ಮಾರಕಾಯುಧಗಳಿಂದ ಮಾರಣಾಂತಿಕ ದಾಳಿ ನಡೆಸಿತ್ತು. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅಬ್ದುಲ್ ರಹೀಂ ಸ್ಥಳದಲ್ಲೇ ಮೃತಪಟ್ಟಿದ್ದರು. ತೀವ್ರವಾಗಿ ಗಾಯಗೊಂಡಿರುವ ಕಲಂದರ್ ಶಾಫಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.