ಮಂಗಳೂರಿನ ಬಜ್ಪೆಯಲ್ಲಿ ನಡೆದ ರೌಡಿ ಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಲಾಗಿದೆ. ಬಿಜೆಪಿ ನಾಯಕರು ಮತ್ತು ಹಿಂದೂ ಕಾರ್ಯಕರ್ತರು NIA ತನಿಖೆಗೆ ಆಗ್ರಹಿಸಿದ್ದರು. ಪ್ರಕರಣದಲ್ಲಿ ಭಾರಿ ಸಂಚು ರೂಪಿಸಲಾಗಿದೆ ಎಂದು ಹಿಂದೂ ಕಾರ್ಯಕರ್ತರು ಆರೋಪ ಮಾಡಿದ್ದರು.
ಬೆಂಗಳೂರು, ಜೂನ್ 08: ಮಂಗಳೂರು ನಗರದ ಬಜ್ಪೆ ಬಳಿ ನಡೆದ ರೌಡಿ ಶೀಟರ್ ಸುಹಾಸ್ ಶೆಟ್ಟಿ (Suhas Shetty) ಕೊಲೆ ಪ್ರಕರಣ ರಾಜ್ಯಾದ್ಯಂತ ಸದ್ದು ಮಾಡಿತ್ತು. ಈ ಪ್ರಕರಣದ ತನಿಖೆಯನ್ನು ಎನ್ಐಎಗೆ ವಹಿಸುವಂತೆ ಬಿಜೆಪಿ ನಾಯಕರು ಸೇರಿದಂತೆ ಆಗ್ರಹಿಸಿದ್ದರು. ಈ ಬೆನ್ನಲ್ಲೇ ರೌಡಿ ಶೀಟರ್ ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಕೇಂದ್ರ ಗೃಹಸಚಿವಾಲಯ ರಾಷ್ಟ್ರೀಯ ತನಿಖಾ ದಳ (NIA) ಕ್ಕೆ ವಹಿಸಿ ಆದೇಶ ಹೊರಡಿಸಿದೆ. ಎನ್ಐಎ ಅಧಿಕಾರಿಗಳು ಪ್ರಕರಣದ ತನಿಖೆ ನಡೆಸಲಿದ್ದಾರೆ.
ಪ್ರಕರಣದ ತನಿಖೆ NIAಗೆ ವಹಿಸುವಂತೆ ಮನವಿ ಮಾಡಿದ್ದ ಬಿಜೆಪಿ
ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸುವಂತೆ ರಾಜ್ಯ ಬಿಜೆಪಿ ನಿಯೋಗ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಮನವಿ ಸಲ್ಲಿಸಿತ್ತು. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಧಾನಸಭೆ ವಿಪಕ್ಷ ನಾಯಕ ಅಶೋಕ್, ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮತ್ತು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರು ರಾಜ್ಯಪಾಲರಿಗೆ ನಾಲ್ಕು ಪುಟಗಳ ಲಿಖಿತ ರೂಪದಲ್ಲಿ ಮನವಿ ಸಲ್ಲಿಸಿದ್ದರು
ಸುಹಾಸ್ ಶೆಟ್ಟಿಯವರನ್ನು ಬರ್ಬರವಾಗಿ ತಲ್ವಾರಿನಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಈ ಪ್ರಕರಣವನ್ನು ಸ್ವೀಕರಿಸಿರುವ ಪೊಲೀಸರು ತೀವ್ರಗತಿಯಲ್ಲಿ ತನಿಖೆ ನಡೆಸುತ್ತಿದ್ದಾರೆ.
ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಿ ಕೇಂದ್ರ ಗೃಹ ಸಚಿವಾಲಯ ಆದೇಶ ಹೊರಡಿಸಿದೆ ಎಂದು ANI ವರದಿ ಮಾಡಿದೆ.