
ಉಡುಪಿ: ನಾಳೆ ಜಿಲ್ಲೆಯಾದ್ಯಂತ ವ್ಯಾಪಕ ಮಳೆ ಆಗುವ ಸಾಧ್ಯತೆ ದಟ್ಟವಾಗಿರುವ ಹಿನ್ನೆಲೆಯಲ್ಲಿ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಇದರ ಜೊತೆಗೆ ಉಡುಪಿಯಲ್ಲಿ ಮಳೆ ಆರ್ಭಟ ಜೋರಾಗಿ ಇರಲಿದೆ. ಮುಂಗಾರು ಮಳೆ ಆರಂಭವಾಗಿದ್ದು ಜಿಲ್ಲೆಯಲ್ಲಿ ನಾಳೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಅಲ್ಲದೇ ಯಾವುದೇ ಅಹಿತಕರ ಘಟನೆ ನಡೆಯಬಾರದೆಂದು ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಕುರಿತು ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಅವರು ಆದೇಶ ಹೊರಡಿಸಿದ್ದಾರೆ.

ಕೊಡಗು ಜಿಲ್ಲೆಯ ಹಲವು ಕಡೆಗಳಲ್ಲಿ ಧಾರಾಕಾರ ಮಳೆಯಾಗುವ ಮುನ್ಸೂಚನೆ ಇದೆ. ಆದ್ದರಿಂದ ಕೊಡಗಿನ ಅಂಗನವಾಡಿಗಳಿಗೂ ನಾಳೆ ರಜೆ ಘೋಷಣೆ ಮಾಡಲಾಗಿದೆ. ಹವಾಮಾನ ಇಲಾಖೆ ಉಡುಪಿ, ಕೊಡುಗು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಇದರಿಂದಾಗಿಯೇ ಉಡುಪಿ ಮತ್ತು ಕೊಡಗು ಜಿಲ್ಲೆಗಳಲ್ಲಿನ ಅಂಗನವಾಡಿ ಮತ್ತು ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಇಂದಿನಿಂದ ಜೂನ್ 13ರ ವರೆಗೆ ಹವಾಮಾನ ಇಲಾಖೆ ಅಲರ್ಟ್ ಕೊಟ್ಟಿದೆ.
ರಾಜ್ಯದ ಹಲವಾರು ಪ್ರದೇಶಗಳಲ್ಲಿ ವರುಣಾರ್ಭಟ ಆರಂಭವಾಗುವ ನಿರೀಕ್ಷೆ ಇದೆ. ಈಗಾಗಲೇ ಬೆಂಗಳೂರಿನಲ್ಲಿ ಇಂದು ಸಂಜೆಯಿಂದಲೇ ಧಾರಾಕಾರ ಮಳೆ ಸುರಿದಿದೆ. ರಾಜ್ಯದ ಹಲವೆಡೆ ಮಳೆಯಾಗಿದೆ. ಜೂನ್ 13ರವರೆಗೂ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆಗಳಲ್ಲಿ ಮಳೆ ಮುನ್ಸೂಚನೆ ಇದೆ. ಹೀಗಾಗಿ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬೀದರ್, ಕಲಬುರಗಿ, ಯಾದಗಿರಿ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ರಾಮನಗರ, ಮಂಡ್ಯ ಸೇರಿದಂತೆ 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.