

ಭ್ರಷ್ಟಾಚಾರ ನಿಲ್ಲುತ್ತದೆ ಎಂಬ ಭರವಸೆ ಇಲ್ಲ: ಎಚ್.ಡಿ.ಕೆ.
“ಎಸಿಬಿ ರದ್ದು ಮಾಡಿ ಲೋಕಾಯುಕ್ತದಲ್ಲಿ ಭ್ರಷ್ಟಾಚಾರ ನಿಲ್ಲಿಸುತ್ತಾರೆ ಎಂಬ ನಂಬಿಕೆ ನನಗೆ ಇಲ್ಲ” ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.
“ಕುರಿ ಕಾಯುವುದಕ್ಕೆ ತೋಳ ಬಿಡುತ್ತಾರೆ ಎನ್ನುತ್ತಾರಲ್ಲ ಹಾಗೆ ಇದು. ಲೋಕಾಯುಕ್ತದಿಂದ ಶುದ್ಧ ಆಗುತ್ತದೆ ಎಂದು ಭಾವಿಸಿಲ್ಲ. ಮೊದಲು ವಿಧಾನಸೌಧದ ಮೂರನೇ ಮಹಡಿ ಶುದ್ಧವಾಗಬೇಕು” ಎಂದು ಸರಕಾರದ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ.

“ಕಾಂಗ್ರೆಸ್ ಸರಕಾರದ ಕಾಲದಲ್ಲಿ ಎಸಿಬಿ ರಚನೆ ಮಾಡಲಾಗಿತ್ತು. ಆ ಸರಕಾರದ ವಿರುದ್ಧ ಬಂದಿದ್ದ ಅನೇಕ ಆರೋಪಗಳನ್ನು ಮೂಲೆಗುಂಪು ಮಾಡುವ ನಿಟ್ಟಿನಲ್ಲಿ ಎಸಿಬಿ ರಚನೆಯಾಗಿತ್ತು. ವಿಧಾನ ಮಂಡಲದಲ್ಲಿ ಕಾಯಿದೆ ತಂದು ಎಸಿಬಿಯನ್ನು ರಚನೆ ಮಾಡಿದ್ದಲ್ಲ ಅದು. ಆ ಸರಕಾರ ಮುಖಭಂಗದಿಂದ ಪಾರಾಗಲು ಎಸಿಬಿ ರಚನೆ ಮಾಡಿತ್ತು” ಎಂದು ಕುಮಾರಸ್ವಾಮಿ ಅವರು ಟೀಕಿಸಿದರು.
“ಐದು ವರ್ಷ ಆಡಳಿತ ನಡೆಸಿದ ಕಾಂಗ್ರೆಸ್ ಸರಕಾರ ತರಾತುರಿಯಲ್ಲಿ ಮಾಡಿದ ಆಗಿನ ಲೋಪದೋಷ ಮುಚ್ಚಿಕೊಳ್ಳಲು ಮಾಡಿದ ತನಿಖಾ ಸಂಸ್ಥೆಯೇ ಎಸಿಬಿ. ನಾನು ಮುಖ್ಯಮಂತ್ರಿ ಆಗಿದ್ದಾಗ ಮತ್ತೊಬ್ಬರ ಮರ್ಜಿನಲ್ಲಿ ಇದ್ದೆ. ಹೀಗಾಗಿ ಎಸಿಬಿಯನ್ನು ರದ್ದು ಮಾಡಲು ನನ್ನಿಂದ ಆಗಲಿಲ್ಲ. ನನ್ನ ಸರಕಾರ ತೆಗೆದು ಅಧಿಕಾರಕ್ಕೆ ಬಂದ ಬಿಜೆಪಿಯು ಎಸಿಬಿಯನ್ನು ರದ್ದು ಮಾಡಲು ಮೂರು ವರ್ಷಗಳಿಂದ ಆಸಕ್ತಿಯನ್ನೆ ತೋರಲಿಲ್ಲ. ಈಗ ರಾಜ್ಯ ಹೈಕೋರ್ಟ್ ಎಸಿಬಿಯನ್ನು ರದ್ದುಗೊಳಿಸುವ ಆದೇಶ ಮಾಡಿದೆ. ಎಸಿಬಿಗೆ ನೀಡಲಾಗಿದ್ದ ಪೊಲೀಸ್ ಠಾಣೆ ಸ್ಥಾನಮಾನವನ್ನು ಮರಳಿ ಲೋಕಾಯುಕ್ತ ಸಂಸ್ಥೆಗೆ ನೀಡಿದೆ” ಎಂದು ತಿಳಿಸಿದ್ದಾರೆ.
ಸಿದ್ದರಾಮಯ್ಯ ಸರ್ಕಾರ ಹುಟ್ಟುಹಾಕಿದ್ದ ಕರ್ನಾಟಕ ಭ್ರಷ್ಟಾಚಾರ ನಿಗ್ರಹ ದಳವನ್ನು (ಎಸಿಬಿ) ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದ್ದು, ಲೋಕಾಯುಕ್ತಕ್ಕೆ ಮರುಜೀವ ನೀಡಿದೆ.
ಎಸಿಬಿಯಲ್ಲಿ ಬಾಕಿ ಉಳಿದಿರುವ ಎಲ್ಲಾ ಪ್ರಕರಣಗಳನ್ನು ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗಕ್ಕೆ ವರ್ಗಾಯಿಸಲು ಕೋರ್ಟ್ ಆದೇಶಿಸಿದೆ.
2016 ರಲ್ಲಿ ಲೋಕಾಯುಕ್ತ ಅಧಿಕಾರವನ್ನು ಮೊಟಕುಗೊಳಿಸಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಎಸಿಬಿ ರಚನೆ ಮಾಡಿತ್ತು. ಇದನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಅರ್ಜಿಗಳು ದಾಖಲಾಗಿದ್ದವು. ವಿಚಾರಣೆ ನಡೆಸಿದ ಜಸ್ಟೀಸ್ ಬಿ ವೀರಪ್ಪ ಹಾಗೂ ಜಸ್ಟೀಸ್ ಕೆ.ಎಸ್. ಹೇಮಲೇಖ ಅವರಿದ್ದ ಪೀಠ ತೀರ್ಪು ನೀಡಿದೆ.
