

ದೆಹಲಿ: ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ 11 ಅಪರಾಧಿಗಳ ಬಿಡುಗಡೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಗುಜರಾತ್ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ಬಿಲ್ಕಿಸ್ ಬಾನೊ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 11 ಅಪರಾಧಿಗಳಿಗೆ ಗುಜರಾತ್ ಸರ್ಕಾರ ವಿನಾಯತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸುತ್ತಿದೆ.
ಸಿಪಿಐ(ಎಂ) ಪಾಲಿಟ್ಬ್ಯುರೊ ಸದಸ್ಯೆ ಸುಭಾಷಿಣಿ ಅಲಿ, ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಮತ್ತು ಮಹಿಳಾ ಹಕ್ಕುಗಳ ಕಾರ್ಯಕರ್ತರು ಸಲ್ಲಿಸಿರುವ ಅರ್ಜಿಗಳನ್ನು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಮಂಗಳವಾರ ಒಪ್ಪಿಗೆ ನೀಡಿದೆ.
ಯಾವ ಆಧಾರದ ಮೇಲೆ ಬಿಲ್ಕಿಸ್ ಬಾನೊ ಅತ್ಯಾಚಾರಿಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ರಾಜ್ಯ ಸರ್ಕಾರಕ್ಕೆ ಸುಪ್ರೀಂ ಪ್ರಶ್ನಿಸಿದೆ. ಜತೆಗೆ ಬಿಡಗಡೆಗೊಂಡ 11 ಅಪರಾಧಿಗಳನ್ನು ಪ್ರಕರಣದ ವಿಚಾರಣೆಯಲ್ಲಿ ಭಾಗಿಯಾಗುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಮುಖ್ಯನ್ಯಾಯಮೂರ್ತಿ ಎನ್ ವಿ ರಮಣ ಅವರ ನೃತೃತ್ವದ ಪೀಠದಲ್ಲಿ ಈ ಮಹತ್ವದ ನಿರ್ಣಯ ತೆಗೆದುಕೊಳ್ಳಲಾಗಿದೆ. ಬಿಲ್ಲಿಕ್ ಬಾನೊ ಅತ್ಯಾಚಾರಿಗಳನ್ನು ಬಿಡುಗಡೆಗೊಳಿಸಿದ ಗುಜರಾತ್ ಸರ್ಕಾರದ ನಿರ್ಧಾರವನ್ನು ದೇಶಾದ್ಯಂತ ಖಂಡಿಸಲಾಗಿತ್ತು. ಮಹಿಳಾ ಸಬಲೀಕರಣದ ಬಗ್ಗೆ ಮಾತನಾಡುವ ಸರ್ಕಾರ ಇಬ್ಬಗೆ ನೀತಿ ಅನುಸರಿಸಿದೆ ಎಂಬ ಆಕ್ರೋಶ ಜಾಗತಿಕವಾಗಿ ಕೇಳಿ ಬಂದಿತ್ತು. ಇದರ ಬೆನ್ನಲ್ಲೇ ಸುಪ್ರೀಂ ಕೋರ್ಟ್ ಪ್ರಕರಣದ ವಿಚಾರಣೆ ಆರಂಭಿಸಿದೆ. ಎರಡು ವಾರಗಳಲ್ಲಿ ಪ್ರಕರಣದ ಪೂರ್ಣಾವಧಿ ವಿಚಾರಣೆ ಆರಂಭಿಸುವುದಾಗಿ ಕೋರ್ಟ್ ತಿಳಿಸಿದೆ.