

ಹೈದರಾಬಾದ್: ತೆಲಂಗಾಣದ ಸಿಕಂದರಾಬಾದ್‌ನಲ್ಲಿರುವ (Secunderabad) ಎಲೆಕ್ಟ್ರಿಕ್ ಸ್ಕೂಟರ್ ಶೋರೂಂನಲ್ಲಿ ಇಂದು ಮುಂಜಾನೆ ಬೆಂಕಿ ಹೊತ್ತಿಕೊಂಡ ಪರಿಣಾಮ ಎಂಟು ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.
ಕಟ್ಟಡದ ನೆಲಮಹಡಿಯಲ್ಲಿರುವ ರೂಬಿ ಎಲೆಕ್ಟ್ರಿಕ್ ಸ್ಕೂಟರ್ ಶೋರೂಂನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಶೀಘ್ರದಲ್ಲೇ ಮೊದಲ ಮತ್ತು ಎರಡನೇ ಮಹಡಿಗೂ ವ್ಯಾಪಿಸಿದೆ. ಪರಿಣಾಮವಾಗಿ ಎಂಟು ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅವರಲ್ಲಿ ಹೆಚ್ಚಿನವರು ಹೊಗೆಯಿಂದ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಕಟ್ಟಡದ ಮೇಲಿನ ಮಹಡಿಯಿಂದ ಹಲವರು ಜಿಗಿಯುವ ವೀಡಿಯೋ ದೃಶ್ಯ ವೈರಲ್ ಆಗಿದೆ. ಅವಘಡದಲ್ಲಿ ಗಾಯಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಯಿತು. ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ವಾಹನಗಳು ಧಾವಿಸಿದ್ದು, ಬೆಂಕಿಯನ್ನು ನಂದಿಸುವ ಕಾರ್ಯಾಚರಣೆ ನಡೆಸುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಕಿ ಹೊತ್ತಿಕೊಳ್ಳಲು ಕಾರಣವೇನೆಂಬುದನ್ನು ತಿಳಿಯಲು ತನಿಖೆ ಪ್ರಾರಂಭಿಸಲಾಗಿದೆ ಎಂದು ತೆಲಂಗಾಣ ಗೃಹ ಸಚಿವ ಮೊಹಮ್ಮದ್ ಮೆಹಮೂದ್ ಅಲಿ ಹೇಳಿದ್ದಾರೆ.
ಘಟನೆ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ವಿಷಾದ ವ್ಯಕ್ತಪಡಿಸಿದ್ದಾರೆ. ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (PMNRF) ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ ತಲಾ 50 ಸಾವಿರ ರೂ. ಪರಿಹಾರ ಘೋಷಿಸಲಾಗಿದೆ.