

ಬೆಂಗಳೂರು: ರಾಜಕೀಯ ಸೇಡು, ಕಿರುಕುಳಕ್ಕೆ ಹೆದರುವವನು ನಾನಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ.
ಐಟಿ ದಾಖಲಿಸಿದ್ದ ಪ್ರಕರಣವನ್ನು ರದ್ದು ಮಾಡಿದ್ದ ಹೈಕೋರ್ಟ್ (HighCourt) ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಈ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿದ ಡಿಕೆಶಿ, ನನಗೆ ಭಾರತೀಯ ನ್ಯಾಯಾಂಗ ವ್ಯವಸ್ಥೆಯ ಬಗ್ಗೆ ಸಂಪೂರ್ಣ ನಂಬಿಕೆ ಇದೆ. ಒಂದಲ್ಲಾ ಒಂದು ದಿನ ನಾನು ನಿರಪರಾಧಿ ಎಂದು ಸಾಬೀತಾಗುತ್ತದೆ. ರಾಜಕೀಯ ಸೇಡು, ಕಿರುಕುಳಕ್ಕೆ ಹೆದರುವವನು ನಾನಲ್ಲ. ಕರ್ನಾಟಕದ ಜನರ ಪರವಾಗಿ ಮಾತನಾಡಿದ್ದಕ್ಕೆ, ನಿರುದ್ಯೋಗ, ಬೆಲೆ ಏರಿಕೆಯಂತಹ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಿದ್ದಕ್ಕಾಗಿ ಈ ಬೆಲೆ ತೆರಬೇಕಾಗಿದೆ ಎಂದು ತಿಳಿಸಿದ್ದಾರೆ.
2018 ರಲ್ಲಿ ಬಿಡದಿಯ ಈಗಲ್ಟನ್ ರೆಸಾರ್ಟ್ ಮೇಲೆ ದಾಳಿ ನಡೆಸಿದ್ದ ಐಟಿ ಪ್ರಕರಣ ದಾಖಲಿಸಿತ್ತು. ಈ ಪ್ರಕರಣವನ್ನು ಹೈಕೋರ್ಟ್(High Court) ರದ್ದು ಮಾಡಿತ್ತು. ಈ ಆದೇಶವನ್ನು ಪ್ರಶ್ನಿಸಿ ಐಟಿ ಸುಪ್ರೀಂನಲ್ಲಿ(Supreme Court) ಮೇಲ್ಮನವಿ ಸಲ್ಲಿಸಿತ್ತು.
ಈ ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾ.ಸಂಜೀವ್ ಖನ್ನಾ ನೇತೃತ್ವದ ದ್ವಿಸದಸ್ಯ ಪೀಠ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿ ಪ್ರತಿಕ್ರಿಯೆ ನೀಡುವಂತೆ ನೋಟಿಸ್ ಜಾರಿ ಮಾಡಿದೆ. ಅಷ್ಟೇ ಅಲ್ಲದೇ 4 ವಾರದ ಒಳಗಡೆ ಹೊಸ ಅರ್ಜಿ ಸಲ್ಲಿಕೆ ಮಾಡುವಂತೆ ಐಟಿಗೆ ಸೂಚಿಸಿದೆ